ಬೆಂಗಳೂರು : ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 12 ಶುರುವಾಗಿ ಒಂದೇ ವಾರದಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದು, ಈ ಕೂಡಲೇ ಬಿಗ್ ಬಾಸ್ ಮನೆಯನ್ನು ಬಂದ್ ಮಾಡುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ.
ಕಳೆದ ಸೀಸನ್ನಲ್ಲಿ ಮಹಿಳಾ ಆಯೋಗದಿಂದ ಬಿಗ್ ಬಾಸ್ ಆಯೋಜಕರಿಗೆ ನೋಟಿಸ್ ನೀಡಲಾಗಿತ್ತು. ಈಗ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿ ಬಿಗ್‌ಬಾಸ್‌ಗೆ ಶಾಕ್ ಕೊಟ್ಟಿದೆ. ಶೋ ಆಯೋಜಕರು ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಿಲ್ಲ ಎಂಬ ಕಾರಣಕ್ಕೆ ನೋಟಿಸ್ ನೀಡಲಾಗಿದ್ದು, ಕೂಡಲೇ ಮನೆಯನ್ನು ಬಂದ್ ಮಾಡುವಂತೆ ಸೂಚಿಸಲಾಗಿದೆ.
ಬಿಡದಿ ಸಮೀಪ ಇರುವ ಜಾಲಿವುಡ್ ಸ್ಟುಡಿಯೋದಲ್ಲಿ ಈ ಬಾರಿಯ ಬಿಗ್ ಬಾಸ್ ಮನೆಯನ್ನು ನಿರ್ಮಿಸಲಾಗಿದ್ದು, ಒಟ್ಟು 19 ಜನರು ಬಿಗ್ ಬಾಸ್ ಮನೆಗೆ ಸ್ಪರ್ಧಿಗಳಾಗಿ ಎಂಟ್ರಿ ನೀಡಿದ್ದರು. ಬಳಿಕ ಇಬ್ಬರು ಎಲಿಮಿನೇಟ್ ಆಗಿದ್ದಾರೆ. ಬಿಗ್‌ಬಾಸ್ ಶೋನ ತೆರೆ ಹಿಂದೆ ನೂರಾರು ಮಂದಿ ತಂತ್ರಜ್ಞರು ಕೆಲಸ ಮಾಡುತ್ತಿದ್ದು, ಈ ಕಾರ್ಯಕ್ರಮದಿಂದ ಸಾಕಷ್ಟು ತಾಜ್ಯ ಉಂಟಾಗಲಿದೆ.
ಜಾಲಿವುಡ್ ಸ್ಟುಡಿಯೋದಲ್ಲಿ ಉಂಟಾಗುತ್ತಿರುವ ತಾಜ್ಯವನ್ನು ಸೂಕ್ತ ರೀತಿಯಲ್ಲಿ ಸಂಸ್ಕರಣೆ ಮತ್ತು ವಿಲೇವಾರಿ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೇ, ಜಾಲಿವುಡ್ ಸ್ಡುಡಿಯೋ ನಡೆಸಲು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆದಿಲ್ಲ ಎನ್ನಲಾಗಿದೆ. ಈ ಕಾರಣದಿಂದ ಶೋ ಆಯೋಜಕರಿಗೆ ನೋಟಿಸ್ ನೀಡಲಾಗಿದ್ದು, ಬಂದ್ ಮಾಡುವಂತೆ ಸೂಚಿಸಲಾಗಿದೆ.



















