ನವದೆಹಲಿ: ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ (Mekedatu and Upper Bhadra projects) ಅನುಷ್ಠಾನಕ್ಕೆ ಸಹಾಯ ಮಾಡಬೇಕೆಂದು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಗೆ ಸಿಎಂ ಸಿದ್ದರಾಮಯ್ಯ (Siddaramaiah) ಮನವಿ ಮಾಡಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಸಿಎಂ, ರಾಜ್ಯದ ಬಾಕಿಯಿರುವ ಎಲ್ಲ ನೀರಾವರಿ ಯೋಜನೆಗಳಿಗೆ ಹಾಗೂ ಪ್ರಸ್ತಾವನೆಗಳಿಗೆ ಅನುಮತಿ ನೀಡಬೇಕು ಎಂದು ಈ ವೇಳೆ ಸಚಿವರನ್ನು ಮನವಿ ಮಾಡಿದ್ದಾರೆ.
ಆ ಮೂಲಕ ರೈತರ (Farmers) ಕಲ್ಯಾಣಕ್ಕೆ ಕೇಂದ್ರ ಸರ್ಕಾರ ನೆರವಾಗಬೇಕು. ರಾಜಸ್ಥಾನ ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ಹೀಗಾಗಿ ರಾಜ್ಯದ ನೀರಾವರಿ ಯೋಜನೆಗಳ ವಿಷಯದಲ್ಲಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ನಾಯಕರು ಇದ್ದರು.