ಮೈಸೂರು: ಸಿಎಂ ಬಿಜೆಪಿ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ರಾಜ್ಯಪಾಲರು, ಸಿಬಿಐ, ಇಡಿ, ಐಟಿಗಳನ್ನು ದುರುಪಯೋಗಪಡಿಸಿಕೊಂಡು ಆಟ ಆಡ್ತೀರಾ? ಎಂದು ಬಿಜೆಪಿ ವಿರುದ್ಧ ತಮ್ಮದೆ ಭಾಷೆಯಲ್ಲಿ ಗುಡುಗಿದ್ದಾರೆ.
ಟಿ. ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿಯವರೆಗೆ ಅರವಿಂದ್ ಕೇಜ್ರಿವಾಲ್ ಅವರನ್ನು ಹತ್ತಿಕ್ಕುವ ಯತ್ನ ಮಾಡಿದೀರಿ. ಈಗ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ನಾನು ಇಂದು, ನಿನ್ನೆ ಮಂತ್ರಿಯಾದವನಲ್ಲ. 40 ವರ್ಷಗಳಿಂದ ಆದವನು. ಆದರೂ ನನ್ನನ್ನು ಸುಳ್ಳು ಕೇಸ್ ನಲ್ಲಿ ಎಳೆಯುತ್ತೀರಾ? ಎಂದು ಗುಡುಗಿದ್ದಾರೆ.
ರಾಜ್ಯದ ಜನರೇನು ಮೂರ್ಖರಾ. ರಾಜ್ಯದ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಷಡ್ಯಂತ್ರಗಳಿಗೆ ನಾನು ಯಾವತ್ತೂ ಬಗ್ಗಲ್ಲ. ಸುಖಾ ಸುಮ್ಮನೆ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಭಯಾನಕ ಸುಳ್ಳುಗಳನ್ನು ಹೇಳುತ್ತಿವೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಹಸಿ ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿವೆ. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂ. ಕೊಟ್ಟರೆ, ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂ. ನೀಡಿದೆ ಎಂದು ಹೇಳಿದ್ದಾರೆ.