ಬೆಂಗಳೂರು : ವಿಧಾನಸೌಧದಲ್ಲಿ ನಾಳೆಯೇ ಬೆಳಗ್ಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಮತ್ತು ಮಧ್ಯಾಹ್ನ ರೈತ ಹೋರಾಟಗಾರರ ಸಭೆ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಬೆಳಗಾವಿ, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ನನಗೆ ಸ್ಪಷ್ಟ ಮಾಹಿತಿ ಇದೆ. ಹಾಗಾಗಿ ನಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮತ್ತು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಇಲಾಖೆಯ ಆಯುಕ್ತರಿಗೆ ಸೂಚನೆಗಳನ್ನು ನೀಡಿ ರೈತರು ಹಾಗೂ ಕಾರ್ಖಾನೆಗಳ ಮಾಲೀಕರ ಜೊತೆ ಚರ್ಚೆ ನಡೆಸುವಂತೆ ಸೂಚಿಸಲಾಗಿತ್ತು.
ಅದರಂತೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿ ಶೇ. 11.25 ರಿಕವರಿ ಬಂದರೆ 3,200 ರೂ. ಹಾಗೂ ಶೇ.10.25 ರಿಕವರಿ ಬಂದರೆ 3100 ರೂ. ಗಳನ್ನು (ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) ಪಾವತಿಸುವಂತೆ ಕಾರ್ಖಾನೆಗಳ ಮಾಲೀಕರಿಗೆ ಮನವೊಲಿಸಿದ್ದಾರೆ.
ಈ ದರವನ್ನು ಕೇಂದ್ರ ಸರ್ಕಾರವೆ ನಿಗದಿ ಮಾಡಿದೆ. ಕೇಂದ್ರ ಸರ್ಕಾರವು ನಿಗದಿ ಮಾಡಿರುವ ದರ ರೈತರಿಗೆ ಲಭಿಸುತ್ತಿದೆಯೇ ಎಂದು ನೋಡಿಕೊಳ್ಳುವುದು ಹಾಗೂ ರೈತರಿಗೆ ತೂಕ, ಬೆಲೆ, ಹಾಗೂ ನಿಗದಿತ ಅವಧಿಯಲ್ಲಿ ಪಾವತಿ ಇತ್ಯಾದಿಗಳನ್ನು ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ.
ಇದು ಹಿಂದಿನಿಂದಲೂ ನಡೆದುಕೊಂಡು ಬಂದ ಪದ್ಧತಿ ಹಾಗೂ ಕಬ್ಬು ನಿಯಂತ್ರಣಕ್ಕೆ ಸಂಬಂಧಪಟ್ಟ ಕಾಯ್ದೆಯಲ್ಲಿ ಸ್ಪಷ್ಟವಾಗಿ ಪ್ರಸ್ತಾಪಿಸಲಾಗಿದೆ.
ಇದರ ಜೊತೆಗೆ ತೂಕ, ಇಳುವರಿ, ಕಟಾವು ಮತ್ತು ಬಿಲ್ ಪಾವತಿಗಳಿಗೆ ಸಂಬಂಧಪಟ್ಟಂತೆ ಪರಿಶೀಲನೆಗೆ ಸಮಿತಿಗಳನ್ನು ರಚಿಸಲಾಗಿದೆ. ಸರ್ಕಾರವು ಉಚಿತವಾಗಿ ಎಪಿಎಂಸಿ ಗಳಲ್ಲಿ ಸ್ಥಾಪಿಸಿರುವ ತೂಕದ ಯಂತ್ರಗಳಲ್ಲಿ ಉಚಿತವಾಗಿ ತೂಕ ಮಾಡಿಕೊಡುವ ವ್ಯವಸ್ಥೆ ಕಲ್ಪಿಸಿದ್ದೇವೆ.
2024-25 ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳು 522 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆದಿವೆ. ರೈತರಿಗೆ ಈ ಅವಧಿಯಲ್ಲಿ 18,221.88 ಕೋಟಿ ರೂ. ಗಳನ್ನು ಎಫ್.ಆರ್. ಪಿ. ದರದಂತೆ ಪಾವತಿಸಬೇಕಾಗಿತ್ತು. ಆದರೂ ಸಹ ಕೆಲವು ಕಡೆ ರಿಕವರಿ (ಸಕ್ಕರೆ ಇಳುವರಿ) ಹೆಚ್ಚು ಬಂದ ಕಾರಣ 19,569.15 ಕೊಟಿ ರೂ. ಗಳನ್ನು ರೈತರಿಗೆ ಪಾವತಿಸುವಂತೆ ನೋಡಿಕೊಳ್ಳುವಲ್ಲಿ ರಾಜ್ಯ ಸರ್ಕಾರವು ಕ್ರಮ ಕೈಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಉಡುಪಿ | ನವೆಂಬರ್ 28ಕ್ಕೆ ಪ್ರಧಾನಿ ಮೋದಿ, 30ಕ್ಕೆ ಸಿಎಂ ಯೋಗಿ ಭೇಟಿ.. ಸಂತ ಸಂಗಮ, ಶ್ಲೋಕ ಪಠಣ



















