ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ. ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ.
ಹಾಗಂತಾ ಕುಂಭಮೇಳದಲ್ಲಿ ಕಾಲ್ತುಳಿತವಾದಾಗ ಆದಿತ್ಯನಾಥ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ರಾ? ಇತ್ತೀಚೆಗೆ ನಡೆದ ವಿಮಾನ ದುರಂತ, ಸೇತುವೆ ಕುಸಿತ ಪ್ರಕರಣಗಳಲ್ಲಿ ಯಾರ್ಯಾರು ರಾಜೀನಾಮೆ ನೀಡಿದ್ದಾರೆ ಹೇಳಿ. ಬಿಜೆಪಿಗೆ ಈ ಬಗ್ಗೆ ಮಾತನಾಡುವ ಇಲ್ಲಾ ಪ್ರತಿಭಟಿಸುವ ನೈತಿಕತೆ ಇಲ್ಲಾ ಅಂತಾ ಸಿಎಂ ಕಿಡಿಕಾರಿದ್ದಾರೆ.