ಬೆಂಗಳೂರು : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್.ವೈ.ಮೇಟಿ (79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಎಚ್.ವೈ ಮೇಟಿ ಅವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಷಯ ತಿಳಿದು ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯನವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಇದೀಗ ದಿಢೀರ್ ಮೇಟಿ ಅವರ ನಿಧನದ ಸುದ್ದಿ ತಿಳಿದು ಸಿಎಂ ಸಿದ್ದರಾಮಯ್ಯನವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂತಾಪ ;
ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಎಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ. ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ.
ನಾಳೆ ಹುಟ್ಟೂರಲ್ಲಿ ಅಂತ್ಯಕ್ರಿಯೆ
ಎಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ನಾಳೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷದ ಪ್ರಮುಖರು ಭಾಗಿಯಾಗಿ ಅಂತಿಮ ನಮನ ಸಲ್ಲಿಸಲಿದ್ದಾರೆ.
ಇದನ್ನೂ ಓದಿ : ಬಾಗಲಕೋಟೆ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್.ವೈ.ಮೇಟಿ ವಿಧಿವಶ



















