ಬೆಂಗಳೂರು | ಕರ್ನಾಟಕದಲ್ಲಿ ದಕ್ಷ ಹಾಗೂ ಜನಸ್ನೇಹಿ ಆಡಳಿತಕ್ಕೆ ಹೆಸರಾಗಿದ್ದ ದಿವಂಗತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಅನುಕಂಪದ ಕೆಲಸ ನೀಡಬೇಕೆಂಬ ಕೂಗು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಇತ್ತೀಚೆಗೆ ಮಹಾಂತೇಶ್ ಅವರ ಪುತ್ರಿ ಚೈತನ್ಯ ಮಹಾಂತೇಶ್ ಬೀಳಗಿ ಅವರಿಗೆ ಸರ್ಕಾರಿ ನೌಕರಿ ನೀಡಲು ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿತ್ತು. ಅದರಂತೆ ಇದೀಗ ಮಹಾಂತೇಶ್ ಪುತ್ರಿಗೆ ಅಧಿಕೃತವಾಗಿ ನೇಮಕಾತಿ ಆದೇಶವನ್ನು ನೀಡಲಾಗಿದೆ.
ದಕ್ಷ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರು ಸೇವೆಯಲ್ಲಿದ್ದಾಗಲೇ ದಿನಾಂಕ 25.11.2025ರಂದು ಭೀಕರ ಕಾರು ಅಪಘಾತದಲ್ಲಿ ನಿಧನರಾಗಿದ್ದರು. ಅವರ ಕುಟುಂಬದ ಆಧಾರಸ್ತಂಭವಾಗಿದ್ದ ಅಧಿಕಾರಿಯ ಅಗಲಿಕೆಯ ನಂತರ, ಅವರ ಅವಲಂಬಿತರಿಗೆ ನೆರವಾಗಲು ಸರ್ಕಾರವು ಕರ್ನಾಟಕ ನಾಗರೀಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ನಿಯಮ 6(1)ರನ್ವಯ ಈ ಕ್ರಮ ಕೈಗೊಂಡಿದೆ.
ದಿವಂಗತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಕುಮಾರಿ ಚೈತನ್ಯಾ ಎಂ. ಬೀಳಗಿ ಅವರಿಗೆ ಕರ್ನಾಟಕ ಸರ್ಕಾರವು ಅನುಕಂಪದ ಆಧಾರದ ಮೇಲೆ ಸಚಿವಾಲಯದಲ್ಲಿ ಸಹಾಯಕ ಹುದ್ದೆ ನೀಡಲಾಗಿದೆ. ಇಂದು (ಜನವರಿ 29) ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಚೈತನ್ಯಾ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದ್ದಾರೆ.
ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಮತ್ತು ಶಿವಾನಂದ ಪಾಟೀಲ್ ಅವರು ಉಪಸ್ಥಿತರಿದ್ದರು. ಅಲ್ಲದೆ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಈ ವೇಳೆ ಹಾಜರಿದ್ದು, ಕುಟುಂಬಕ್ಕೆ ಧೈರ್ಯ ತುಂಬಿದರು.
ಇದನ್ನೂ ಓದಿ : ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ನ ಹೊಸ ಕ್ರೂರ ಕಾನೂನು | ಗುಲಾಮಗಿರಿಗೆ ಮಾನ್ಯತೆ.. ಮುಲ್ಲಾಗಳಿಗೆ ಶಿಕ್ಷೆಯಿಂದ ಸಂಪೂರ್ಣ ವಿನಾಯಿತಿ



















