ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಶ್ರೀ, ಗೋ.ರು.ಚನ್ನಬಸಪ್ಪ, ಸಚಿವರಾದ ಚಲುವರಾಯಸ್ವಾಮಿ, ಮಹದೇವಪ್ಪ, ಶಿವರಾಜ್ ತಂಗಡಗಿ, ಸಭಾಧ್ಯಕ್ಷ ಯು.ಟಿ.ಖಾದರ್, ಸಾಹಿತಿ ಚಂದ್ರಶೇಖರ ಕಂಬಾರ, ಶಾಸಕರು ಸೇರಿದಂತೆ ಹಲವರು ಇದ್ದರು.
ಸಮ್ಮೇಳನದ ಮಹಾದ್ವಾರಗಳು, ಪ್ರವೇಶದ್ವಾರ, ಪುಸ್ತಕ ಮಳಿಗೆ, ವಾಣಿಜ್ಯ ಮಳಿಗೆಗಳಿಗೆ ಶಾಸಕರು ಹಾಗೂ ಸಚಿವರು ಚಾಲನೆ ನೀಡಿದರು. “ಹೊಂಬಾಳೆ ಅರಳಿಸಿ ಕನ್ನಡ ನುಡಿ ಅರಳಲಿ” ಎಂಬ ಆಶಯದೊಂದಿಗೆ ಈ ಬಾರಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಶಾಸಕ ನರೇಂದ್ರಸ್ವಾಮಿ ಸಂವಿಧಾನ ಪೀಠಿಕೆ ಬೋಧಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನ ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯುತ್ತಿದೆ. ನಗರದ ಹೊರವಲಯದ ಸಾಂಜ್ಯೋ ಆಸ್ಪತ್ರೆ ಹಿಂಭಾಗದ ಸುಮಾರು 70 ಎಕರೆ ಪ್ರದೇಶದಲ್ಲಿ ನುಡಿಹಬ್ಬ ನಡೆಯುತ್ತಿದೆ. ಪ್ರಧಾನ ವೇದಿಕೆಗೆ ರಾಜಮಾತೆ ಕೆಂಪ್ಪನಂಜಮ್ಮಣಿ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ. ಅಲ್ಲದೇ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸರ್ ಮಿರ್ಜಾ ಇಸ್ಮಾಯಿಲ್ ಮಹಾ ಮಂಟಪ ಕೂಡ ನಿರ್ಮಾಣ ಮಾಡಲಾಗಿದೆ.
ಸಮ್ಮೇಳನದ ಗೌರವಾಧ್ಯಕ್ಷ ಗೊರಾ ಚನ್ನಬಸಪ್ಪ ಅವರನ್ನು ಮಂಡ್ಯದ ಸರ್ ಎಂ ವಿಶ್ವೇಶ್ವರ ಅವರ ಪ್ರತಿಮೆ ಮುಂಭಾಗದಿಂದ ಸಾಹಿತ್ಯ ಸಮ್ಮೇಳನದ ವೇದಿಕೆಯವರೆಗೂ ಬೃಹತ್ ಮೆರವಣಿಗೆ ನಡೆಯಿತು.
ಸಾಹಿತ್ಯಸಕ್ತರಿಗಾಗಿ 450 ಪುಸ್ತಕ ಮಳಿಗೆಗಳು ಹಾಗೂ 350 ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ನುಡಿಹಬ್ಬಕ್ಕೆ ಲಕ್ಷಾಂತರ ಜನರು ಭಾಗಿಯಾಗುವ ಹಿನ್ನೆಲೆಯಲ್ಲಿ ಬಗೆ ಬಗೆಯ ಖಾದ್ಯಗಳನ್ನು ಕೂಡ ತಯಾರಿ ಮಾಡಲಾಗಿದೆ. ಉಪಹಾರ ಹಾಗೂ ಊಟಕ್ಕಾಗಿ 150 ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಹಾಗೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.