ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ ಅಕ್ರಮವಾಗಿ ಸೈಟ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಶೋಕಾಸ್ ನೋಟಿಸ್ ಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.
ಉತ್ತರದೊಂದಿಗೆ ರಾಜ್ಯಪಾಲರಿಗೆ ಸಮರ್ಪಕವಾದ ದಾಖಲೆ ಸಲ್ಲಿಸಿದ್ದಾರೆ. ವೈಯಕ್ತಿಕವಾಗಿ ದಾಖಲೆಗಳ ಸಮೇತ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಗೆ ವಿವರಣೆ ನೀಡಿದ್ದಾರೆ. ರಾಜ್ಯಪಾಲರು ಸಿಎಂಗೆ ನೇರವಾಗಿ ನೋಟಿಸ್ ನೀಡಿದ್ದರಿಂದಾಗಿ ಖುದ್ದಾಗಿ ಉತ್ತರ ನೀಡಿದ್ದಾರೆ. ಇದರಲ್ಲಿ ಸಚಿವ ಸಂಪುಟದ ನಿರ್ಣಯ ಸೇರಿಸಿಲ್ಲ ಎನ್ನಲಾಗಿದೆ.
ರಾಜ್ಯಪಾಲರು ನೋಟಿಸ್ ನಲ್ಲಿ ಉಲ್ಲೇಖಸಿರುವ ಆರೋಪಗಳನ್ನು ಸಿಎಂ ನಿರಾಕರಿಸಿದ್ದಾರೆ. ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ನನ್ನ ಪಾತ್ರವಿಲ್ಲ. ಯಾವುದೇ ಪ್ರಭಾವವನ್ನೂ ಬಳಸಿಲ್ಲ. ಕಾನೂನಾತ್ಮಕವಾಗಿಯೇ ಪತ್ನಿಗೆ ಸೈಟ್ ಹಂಚಿಕೆಯಾಗಿದೆ ಎಂದು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳುಹಿಸಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಕಳೆದ ವಾರ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ದೂರು ನೀಡಿದ್ದರು. ಆನಂತರ ರಾಜ್ಯಪಾಲರು ಸಿಎಂಗೆ ಶೋಕಾಸ್ ನೋಟಿಸ್ ನೀಡಿದ್ದರು. ಇದರ ಬೆನ್ನಲ್ಲಿಯೇ ರಾಜ್ಯಭವನಕ್ಕೆ ಮತ್ತೊಮ್ಮೆ ಮಂಗಳವಾರ ಟಿಜೆ ಅಬ್ರಾಹಂ ಭೇಟಿ ನೀಡಿದ್ದರು. ಅಲ್ಲದೇ, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದರು.
ಅಲ್ಲದೇ, ಈಗ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಪ್ರಭಾವ ಬಳಸಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ದಾಖಲೆ ಸಮೇತ ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಇನ್ನೊಂದೆಡೆ ಬಿಜೆಪಿ-ಜೆಡಿಎಸ್ ಮೈತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪಾದಯಾತ್ರೆ ನಡೆಸುತ್ತಿವೆ.