ತುಮಕೂರು: ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Microfinance) ಸಮಸ್ಯೆಗಳು ವಿಪರೀತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ನಿಯಮ ಜಾರಿಗೆ ಮುಂದಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ಗಳು ನಿಯಮ ಮೀರಿ ನಡೆದುಕೊಳ್ಳಬಾರದು. ಒಂದು ವೇಳೆ ನಡೆದುಕೊಂಡರೆ ಜಿಲ್ಲಾಧಿಕಾರಿಗಳು ಕಟ್ಟು ನಿಟ್ಟಿನ ನಿಯಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ. ಸುಗ್ರಿವಾಜ್ಞೆ ಮೂಲಕ ಕಾನೂನು ಜಾರಿಗೆ ತರಲಾಗುವುದು. ಸುಮೋಟೊ ಕೇಸ್ ತೆಗೆದುಕೊಳ್ಳಲು ಪೊಲೀಸರಿಗೆ ಅವಕಾಶವಿಲ್ಲ. ಇದಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ಅನಧಿಕೃತ ಫೈನಾನ್ಸ್ ಹಾವಳಿಯನ್ನು ಮಟ್ಟ ಹಾಕಲಾಗುವುದು. ಈ ವರ್ಷ ಏಳು ಜನರು ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಒಟ್ಟು 14 ಪ್ರಕರಣ ದಾಖಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಾನೂನು ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.