ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ ಎಸ್ ಎಸ್ ಟಾರ್ಗೆಟ್ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ನಾಯಕರು ಆರೋಪಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ನಾವು ಆರ್ ಎಸ್ ಎಸ್ ಟಾರ್ಗೆಟ್ ಮಾಡಿಲ್ಲ. ಎಲ್ಲಾ ಸಂಘಟನೆಗಳಿಗೂ ಕೂಡ ಅನ್ವಯ ಆಗುವಂತೆ ಆದೇಶ ಮಾಡಿದ್ದೇವೆ. ಬಿಜೆಪಿ ಇದರಲ್ಲಿ ವಿನಾಕಾರಣ ರಾಜಕಾರಣ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳಿಂದ ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ತಿಳಿಸಿದ್ದಾರೆ.
” ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ , ನಮ್ಮ ಸರ್ಕಾರವೂ ಆದೇಶವನ್ನು ಹೊರಡಿಸಿದೆ. ಬಿಜೆಪಿ ಸರ್ಕಾರ ಹೊರಡಿಸಿದ್ದ ಈ ಆದೇಶಕ್ಕೆ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ಈ ಆದೇಶದಲ್ಲಿ ಸರ್ಕಾರ ಯಾವುದೇ ನಿರ್ದಿಷ್ಟ ಸಂಘಸಂಸ್ಥೆಯನ್ನು ಗುರಿ ಮಾಡಿಲ್ಲ. ಬಿಜೆಪಿ ಜನರ ಹಿತಚಿಂತನೆ ಮಾಡುವುದನ್ನು ಬಿಟ್ಟು ರಾಜಕೀಯದಲ್ಲಿ ತೊಡಗಿದ್ದಾರೆ. ಈ ವಿಷಯದಲ್ಲಿ ಸಮಾಜದ ಶಾಂತಿಭಂಗವಾಗದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಗುತ್ತಿಗೆದಾರರ ಬಾಕಿ ಪಾವತಿಯಾಗದಿದ್ದರೆ ಮಾನ್ಯ ರಾಜ್ಯಪಾಲರನ್ನು ಭೇಟಿಮಾಡುವುದಾಗಿ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಸಂಬಂಧಪಟ್ಟ ಸಚಿವರು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿ. ಇನ್ನೂ ಮೈಸೂರಿನ ಉದ್ಯೋಗ ಮೇಳ ಯಶಸ್ವಿಯಾಗಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ನಿನ್ನೆಯ ಉದ್ಯೋಗ ಮೇಳ ಯಶಸ್ವಿಯಾಗಿ ನೆರವೇರಿದ್ದು, ಈ ಕಾರ್ಯಕ್ರಮವನ್ನು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.