ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಖಾಲಿ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ವಿಶ್ವಗುರು ಮೋದಿ ದೇಶ ಮಾರಾಟ ಮಾಡುತ್ತಿದ್ದಾರೆ” ಎಂದು ಭಿತ್ತಿಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ್ದಾರೆ.
ಈ ವೇಳೆ ಮಾತನಾಡಿದ ಜಿ.ಸಿ. ಚಂದ್ರಶೇಖರ್, ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಲು ಕಾರಣಗಳನ್ನು ಹುಡುಕುತ್ತಿದೆ. ಯುದ್ಧದ ಕಾರಣದಿಂದ ಬೆಲೆ ಏರಿಕೆ ಆಗಿಲ್ಲ, ಆದರೆ 50-60 ರೂಪಾಯಿ ಗ್ಯಾಸ್ ಬೆಲೆ ಹೆಚ್ಚಿಸಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ ಅವರಿಗೆ ಆಡಳಿತ ನಡೆಸಲು ಗೊತ್ತಿಲ್ಲ. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದಂತೆ ಮೋದಿ ನಡೆದುಕೊಳ್ಳುತ್ತಿದ್ದಾರೆ. ದೇಶವನ್ನು ಅಮೆರಿಕದ ಮುಂದೆ ಒತ್ತೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ದೇಶದಲ್ಲಿ ಮಂತ್ರಿಗಳಿಗೆ ಸ್ವಾತಂತ್ರ್ಯವಿಲ್ಲ. ಏನಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಹೇಳಿದಂತೆ ಮಾತ್ರ ನಡೆಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ರಾಮನಗರ | ಜಮೀನು ವಿವಾದಕ್ಕೆ ಎರಡು ಕುಟುಂಬಗಳ ನಡುವೆ ಕಿತ್ತಾಟ ; ಮೂವರ ಮೇಲೆ ಹಲ್ಲೆ



















