ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಭಾನುವಾರ ಶಿಕಾರಿಪುರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿರುವ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಅಲ್ಲದೇ, ಈ ವೇಳೆ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧದ ಆರೋಪಗಳನ್ನು ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ರಾಜ್ಯ ಕಾರ‍್ಯದರ್ಶಿ ನಾಗರಾಜಗೌಡ, ರಾಜ್ಯಪಾಲರು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ವಿರೋಧಿ ನಿಲುವು. ಭ್ರಷ್ಟಾಚಾರ ನಡೆಸಿರುವ ಹಲವು ಬಿಜೆಪಿ ನಾಯಕರ ವಿರುದ್ಧ ತನಿಖೆಗೆ ಆದೇಶ ನೀಡುವಂತೆ ಮನವಿ ಮಾಡಿ ಹಲವು ವರ್ಷಗಳು ಕಳೆದಿದ್ದರೂ ಅದಕ್ಕೆ ಅನುಮತಿ ನೀಡಿಲ್ಲ. ಆದರೆ, ಯಾವ ಕಪ್ಪು ಚುಕ್ಕೆ ಇಲ್ಲದ ನಮ್ಮ ನಾಯಕರ ಮೇಲೆ ತನಿಖೆಗೆ ಆದೇಶಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಭೆಯ ನಂತರ ಪ್ರತಿಭಟನಾ ಮೆರವಣಿಗೆ ಮೂಲಕ ಬಿ.ಎಸ್. ಯಡಿಯೂರಪ್ಪ ಮನೆ ಮುತ್ತಿಗೆ ಹಾಕುವ ಯತ್ನ ನಡೆಸಿದಾಗ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ, ಪಬಿಡುಗಡೆ ಮಾಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳ ಶಿವರಾಮ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿದ್ದರು.