ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಗೆ ನ್ಯಾಯಾಂಗ ನಿಂದನೆಯ ಸಂಕಷ್ಟ ಶುರುವಾಗಿದೆ.
ಜಮೀರ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ (TJ Abraham) ಹೈಕೋರ್ಟ್ನಲ್ಲಿ (High Court) ನ್ಯಾಯಾಂಗ ನಿಂದನೆ (Contempt of Court) ಅರ್ಜಿ ಸಲ್ಲಿಸಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ತೀರ್ಪಿನ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಹಗುರವಾಗಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
“ಹೈಕೋರ್ಟ್ ಆದೇಶ ರಾಜಕೀಯ ತೀರ್ಪು” ಎಂದು ಜಮೀರ್ ಹೇಳಿದ್ದರು. ಹೀಗಾಗಿ ಜಮೀರ್ ವಿರುದ್ಧ ದೂರು ದಾಖಲಾಗಿದೆ. ಆದರೆ, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಮೀರ್, ತೀರ್ಪು ರಾಜಕೀಯ ಪ್ರೇರಿತ ಎಂಬ ಅರ್ಥದಲ್ಲಿ ನಾನು ಹೇಳಿಲ್ಲ. ಬಾಯಿ ತಪ್ಪಿ ಬಂದಿದೆ. ಹೈಕೋರ್ಟ್ ತೀರ್ಪು ಬಂದ ನಂತರ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ನನಗೆ ನ್ಯಾಯಾಲಯದ ಬಗ್ಗೆ ಗೌರವವಿದೆ. ತೀರ್ಪಿಗೆ ನಾನು ತಲೆ ಬಾಗುತ್ತೇನೆ ಎಂದು ಹೇಳಿದ್ದಾರೆ.