ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ 2025ರ ಫೈನಲ್ ಪಂದ್ಯಕ್ಕೆ ದಿನಾಂಕ ಫಿಕ್ಸ್ ಆಗಿದೆ. ಮುಂದಿನ ವರ್ಷ ಜೂನ್ 11 ರಿಂದ 15 ರವರಗೆ ಫೈನಲ್ ಪಂದ್ಯವು ಇಂಗ್ಲೆಂಡ್ ನಲ್ಲಿ ನಡೆಯಲಿದೆ.
ಈ ಫೈನಲ್ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ ಅಥವಾ ಇನ್ನಿತರ ಕಾರಣಗಳಿಂದ ದಿನದಾಟ ನಡೆಯದಿದ್ದರೆ ಮೀಸಲು ದಿನದಾಟದ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ. ಇದಕ್ಕಾಗಿ ಜೂನ್ 16ನ್ನು ಮೀಸಲು ದಿನವಾಗಿ ಘೋಷಿಸಲಾಗಿದೆ. ಸಮಯ ನಿಗದಿಯಾದರೂ ಯಾವ ತಂಡ ಫೈನಲ್ ನಲ್ಲಿ ಸೆಣಸಾಟ ನಡೆಸಲಿವೆ ಎಂಬುವುದು ಮಾತ್ರ ಫೈನಲ್ ಆಗಿಲ್ಲ.
ಪ್ರಸ್ತುತ WTC ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದೆ. ಹಾಗೆಯೇ ಆಸ್ಟ್ರೇಲಿಯಾ ತಂಡ ದ್ವಿತೀಯ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ತಂಡ ಮೂರನೇ ಸ್ಥಾನದಲ್ಲಿದರೆ, ಇಂಗ್ಲೆಂಡ್ ನಾಲ್ಕನೇ ಸ್ಥಾನದಲ್ಲಿದೆ. ಭಾರತ ತಂಡವು ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳನ್ನು ಕ್ಲೀನ್ ಸ್ವೀಪ್ ಮಾಡಿಕೊಂಡರೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪ್ರವೇಶ ಮಾಡುವುದು ಖಚಿತವಾಗುತ್ತದೆ. ಆದರೆ, ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಫೈನಲ್ ಗೇರುವ ಅವಕಾಶ ಹೊಂದಿದೆ.
ಮೂರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಭಾರತ ತಂಡವನ್ನು ಮುಂದಿನ ಟೆಸ್ಟ್ ಸರಣಿಯಲ್ಲಿ ಸೋಲಿಸಿದರೆ ಎರಡನೇ ಸ್ಥಾನಕ್ಕೆ ತಲುಪಲಿದೆ. ಅಲ್ಲದೇ, ಸದ್ಯ ನಾಲ್ಕನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡವು ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸರಣಿಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಫೈನಲ್ ತಲುಪಬಹುದು.
ಹೀಗಾಗಿ ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿರುವ ತಂಡಗಳಿಗೆ ಮುಂಬರುವ ಸರಣಿಗಳು ತುಂಬಾ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿಯೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಫೈನಲ್ ಆಡುವ ತಂಡಗಳು ಯಾವುವು ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಆದರೆ, ಫೈನಲ್ ತಲುಪಲು ಭಾರತ ತಂಡಕ್ಕೆ ಉತ್ತಮ ಅವಕಾಶವಿದೆ. ಬಾಂಗ್ಲಾದೇಶ ವಿರುದ್ಧ ಭಾರತ ತಂಡವು 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.
ನಂತರ ನ್ಯೂಜಿಲೆಂಡ್ ವಿರುದ್ಧ ಭಾರತದಲ್ಲೇ ಮೂರು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಈ ಎರಡೂ ಟೆಸ್ಟ್ ಟೂರ್ನಿಯಲ್ಲಿ ಭಾರತ ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ. ಒಂದು ವೇಳೆ ಈ ಸರಣಿಯಲ್ಲಿ ಟೀಮ್ ಇಂಡಿಯಾ ಕೆಲ ಪಂದ್ಯಗಳಲ್ಲಿ ಸೋಲನುಭವಿಸಿದರೆ, ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂಲಕ ಫೈನಲ್ ತಲುಪುವ ಅವಕಾಶ ಹೊಂದಿದೆ.