ಬೆಂಗಳೂರು: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ (Darshan) ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಹೀಗಾಗಿ ಇಂದು ಆರೋಪಿಗಳನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸಲಿದ್ದು, ನಾಲ್ವರಿಗೂ ಜೈಲು ಫಿಕ್ಸ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ದರ್ಶನ್, ವಿನಯ್, ಧನರಾಜ್, ಪ್ರದೋಶ್ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಲಿದ್ದು, ಕೋರ್ಟ್ ಮುಂದೆ ಹಾಜರುಪಡಿಸಿ ಪರಪ್ಪನ ಅಗ್ರಹಾರಕ್ಕೆ ಕಳಿಸಲು ಪೊಲೀಸರು ತಯಾರಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಪೊಲೀಸರು ಆರೋಪಿಗಳನ್ನು ಮೂರು ಬಾರಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಧ್ಯಾಹ್ನ 3 ಗಂಟೆಯ ನಂತರ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಿಂದ ಕೋರ್ಟ್ ಗೆ ಕರೆದೊಯ್ಯಲಾಗುತ್ತದೆ. ದರ್ಶನ್ ಮನೆಯಲ್ಲಿ ಸಿಕ್ಕಿದ್ದ ಹಣದ ಕುರಿತು ವಿಚಾರಣೆ ನಡೆಸಲು ಎರಡು ದಿನದ ಹಿಂದೆ ಪೊಲೀಸರು, ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಮತ್ತೆ ಕಸ್ಟಡಿಗೆ ತೆಗೆದುಕೊಂಡಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಅವರ ಪೈಕಿ 13 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನುಳಿದವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ.