ದಾವಣಗೆರೆ: ಜಿಲ್ಲೆಯ ಚನ್ನಗಿರಿ ಹೊರವಲಯದಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರರಾದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಚಿತ್ರದುರ್ಗ ತಾಲೂಕಿನ ಕೋಡಿರಂಗವ್ವನಹಳ್ಳಿಯ ಮಂಜುನಾಥ್ (25) ಹಾಗೂ ಹೊಳಲ್ಕೆರೆ ತಾಲೂಕಿನ ಗಣೇಶ್ ಗುಂಡಿಮಡು (27) ಎಂದು ಗುರುತಿಸಲಾಗಿದೆ.
ನಿನ್ನೆ ತಡರಾತ್ರಿ ಚನ್ನಗಿರಿ ಪಟ್ಟಣದ ಅಗ್ನಿಶಾಮಕ ಠಾಣೆ ಮುಂಭಾಗದ ಹೆದ್ದಾರಿ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ. ಚನ್ನಗಿರಿ ಯಿಂದ ಚಿತ್ರದುರ್ಗದ ಕಡೆ ತೆರಳುತ್ತಿದ್ದ ಬೈಕ್‌ಗೆ ಎದುರು ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಡಿಕ್ಕಿ ಹೊಡೆದ ತಕ್ಷಣವೇ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ಮತ್ತಷ್ಟು ಭೀಕರವಾಗಿತ್ತು ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಬಸ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಚನ್ನಗಿರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ : ಜೋಕಾಲಿ ಕಟ್ಟಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು



















