ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿ, ಅಭಿಮಾನಿಗಳು ಸಾವನ್ನಪ್ಪಿದ ಘಟನೆಗೆ ಸರ್ಕಾರವೇ ನೇರ ಹೊಣೆ ಎಂದು ಕನ್ನಡಪರ ಹೋರಾಟಗಾರ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿ, ನೂರಾರು ಜನರು ಗಾಯಗೊಂಡಿದ್ದಾರೆ. ಇದರ ಹೊಣೆಯನ್ನು ಸರ್ಕಾರವೇ ಹೊರಬೇಕು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಹಾಗೂ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಈ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಘಟನೆ ಬಹಳ ಗಂಭೀರವಾಗಿದ್ದು, ಸಾವನ್ನಪ್ಪಿದವರ ಕುಟುಂಬಸ್ಥರಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡಬೇಕು. ಕೂಡಲೇ ಪೊಲೀಸ್ ಆಯುಕ್ತರನ್ನು ವಜಾ ಮಾಡಬೇಕು. ಸರ್ಕಾರ ಕೂಡಲೇ ತನ್ನ ವ್ಯವಸ್ಥೆ ಬಗ್ಗೆ ಹೊಣೆ ಹೊರಬೇಕು ಎಂದು ಕಿಡಿಕಾರಿದ್ದಾರೆ.



















