ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎದುರಿಸುತ್ತಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ತಡೆ ನೀಡಿದೆ. 2018ರ ರಫೇಲ್ ಯುದ್ಧವಿಮಾನ ಒಪ್ಪಂದದ ವಿವಾದದ ವೇಳೆ ರಾಹುಲ್ ಗಾಂಧಿ ಈ ಹೇಳಿಕೆಗಳನ್ನು ನೀಡಿದ್ದರು.ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಪರೇಶ್ ಕುಮಾರ್ ಸಿಂಗ್ ಅವರನ್ನೊಳಗೊಂಡ ಪೀಠವು ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ದೂರುದಾರರಿಗೆ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ನೋಟಿಸ್ ಜಾರಿ ಮಾಡಿದೆ. ಇದರೊಂದಿಗೆ ಕೆಳ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣದ ವಿಚಾರಣೆಗೆ ತಾತ್ಕಾಲಿಕ ತಡೆ ಬಿದ್ದಂತಾಗಿದೆ. ಬಾಂಬೆ ಹೈಕೋರ್ಟ್ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಿದ್ದರು.
ಏನಿದು ಮಾನನಷ್ಟ ಪ್ರಕರಣ?
2018ರ ಸೆಪ್ಟೆಂಬರ್ನಲ್ಲಿ ರಾಜಸ್ಥಾನದಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ರಫೇಲ್ ಒಪ್ಪಂದದ ವಿಚಾರವಾಗಿ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರನ್ನು “ಕಮಾಂಡರ್-ಇನ್-ಥೀಫ್” ಮತ್ತು “ಚೋರೋ ಕೆ ಸರ್ದಾರ್” (ಕಳ್ಳರ ಸರ್ದಾರ) ಎಂದು ಕರೆದಿದ್ದರು ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಬಿಜೆಪಿ ಕಾರ್ಯಕರ್ತ ಮಹೇಶ್ ಶ್ರೀಶ್ರೀಮಲ್ ಎಂಬುವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ರಾಹುಲ್ ಗಾಂಧಿ ಅವರ ಈ ಹೇಳಿಕೆಯಿಂದ ಪ್ರಧಾನಿ ಅವರಷ್ಟೇ ಅಲ್ಲದೆ, ಲಕ್ಷಾಂತರ ಬಿಜೆಪಿ ಕಾರ್ಯಕರ್ತರ ಗೌರವಕ್ಕೂ ಧಕ್ಕೆಯಾಗಿದೆ ಎಂದು ದೂರುದಾರರು ವಾದಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ತಡೆ ನೀಡಿರುವುದರಿಂದ ರಾಹುಲ್ ಗಾಂಧಿಗೆ ದೊಡ್ಡ ಮಟ್ಟದ ನಿರಾಳತೆ ಸಿಕ್ಕಂತಾಗಿದೆ.
ಇದನ್ನೂ ಓದಿ:SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

















