ನವದೆಹಲಿ: 2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 5 ವರ್ಷಗಳಿಂದ ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು (ಜ.05) ವಜಾಗೊಳಿಸಿದೆ. ದೆಹಲಿ ಗಲಭೆಗೆ ಕ್ರಿಮಿನಲ್ ಸಂಚು ರೂಪಿಸಿದ್ದಕ್ಕೆ ಇವರಿಬ್ಬರ ವಿರುದ್ಧವೂ ಸಾಕ್ಷ್ಯಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಆದರೆ, ಇದೇ ಪ್ರಕರಣದ ಇತರೆ ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಂ ಖಾನ್ ಮತ್ತು ಶದಾಬ್ ಅಹ್ಮದ್ ಸೇರಿದಂತೆ ಐವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ಪೀಠವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ.
ಕಠಿಣ ಕಾನೂನಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ, ದೆಹಲಿ ಹೈಕೋರ್ಟ್ ಈ ಹಿಂದೆ ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಹಾಗೂ ಇತರೆ ಐವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಪೊಲೀಸರ ವಾದವೇನು?
ಈ ಕೃತ್ಯಗಳು ಕೇವಲ ಸ್ವಯಂಪ್ರೇರಿತ ಪ್ರತಿಭಟನೆಗಳಾಗಿರಲಿಲ್ಲ, ಬದಲಾಗಿ ರಾಜ್ಯವನ್ನು ಅಸ್ಥಿರಗೊಳಿಸುವ ಉದ್ದೇಶಪೂರಿತ ಪ್ರಯತ್ನಗಳಾಗಿದ್ದವು ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆರೋಪಿಗಳು “ಸರ್ಕಾರ ಬದಲಾವಣೆ” ಮತ್ತು “ಆರ್ಥಿಕ ದಿಗ್ಬಂಧನ”ದ ಗುರಿಯನ್ನು ಹೊಂದಿದ್ದ ಸುಸಜ್ಜಿತ “ಪ್ಯಾನ್-ಇಂಡಿಯಾ” ಪಿತೂರಿಯನ್ನು ನಡೆಸಿದ್ದಾರೆ ಎಂದು ಪೊಲೀಸರು ವಾದಿಸಿದ್ದಾರೆ.
ಅಮೆರಿಕದ ಅಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವ ಸಮಯವನ್ನೇ ನೋಡಿಕೊಂಡು ಈ ಪಿತೂರಿಯನ್ನು ಯೋಜಿಸಲಾಗಿತ್ತು. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿಷಯವನ್ನು ಜಾಗತೀಕರಣಗೊಳಿಸುವುದು ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳ ಗಮನ ಸೆಳೆಯುವುದು ಇದರ ಉದ್ದೇಶವಾಗಿತ್ತು. ಸಿಎಎ ವಿಷಯವನ್ನು “ಶಾಂತಿಯುತ ಪ್ರತಿಭಟನೆ”ಯ ಹೆಸರಿನಲ್ಲಿ ಮರೆಮಾಚಿ, ಜನರನ್ನು ಪ್ರಚೋದಿಸಲು ಬಳಸಿಕೊಳ್ಳಲಾಗಿದೆ ಎಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ವಿವರಿಸಿದ್ದಾರೆ. ಇದನ್ನು ಪರಿಗಣಿಸಿದ ನ್ಯಾಯಾಲಯ, ಉಮರ್ ಮತ್ತು ಇಮಾಮ್ ಜಾಮೀನಿಗೆ ನಿರಾಕರಿಸಿದೆ.
ಇದನ್ನೂ ಓದಿ: ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆತ ಪ್ರಕರಣ | ಮೂವರು ಅಪ್ರಾಪ್ತರು ವಶ



















