ಬೆಂಗಳೂರು: “ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವ ಉದ್ದೇಶದಿಂದ ಸುಳ್ಳು ಹೇಳುವವರ ವಿರುದ್ಧ ಅಗತ್ಯ ಸೂಕ್ತ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿ ಬಳಿ ವರದಿಗಾರರೊಂದಿಗೆ ಮಾತನಾಡಿದ ಡಿಕೆಶಿ, “ಇದು ಧರ್ಮಸ್ಥಳದ ಪರ ಅಥವಾ ವಿರುದ್ಧದ ವಿಚಾರವಲ್ಲ. ಎಲ್ಲ ಪ್ರಕ್ರಿಯೆ ನ್ಯಾಯಬದ್ಧವಾಗಿಯೇ ನಡೆಯಬೇಕು. ಧರ್ಮಸ್ಥಳವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಅಲ್ಲಿನ ಭಕ್ತಿ, ಶ್ರದ್ದೆ ಪ್ರಕ್ರಿಯೆಗಳ ಮೇಲೆ ನನಗೆ ನಂಬಿಕೆ ಮತ್ತು ಆತ್ಮವಿಶ್ವಾಸ ಇದೆ. ಈ ಪ್ರಕರಣದಲ್ಲಿ ಅಪಪ್ರಚಾರ ಮಾಡಿದವರು ಹಾಗೂ ಸುಳ್ಳು ಹೇಳಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ’ ಎಂದು ಎಚ್ಚರಿಕೆ ನೀಡಿದ್ದಾರೆ.
ಎಸ್.ಐ.ಟಿ ತನಿಖೆಯಿಂದ ಅಲ್ಲಿ ನಡೆದಿರುವ ಷಡ್ಯಂತ್ರ ಹೊರಬರಲಿದೆ ಎಂಬ ವಿಶ್ವಾಸವಿದೆ. ಈ ಪ್ರಕರಣದ ವಿಚಾರವಾಗಿ ಗೃಹ ಸಚಿವರು ಅಧಿವೇಶನದಲ್ಲಿ ಉತ್ತರ ನೀಡುವ ಮೂಲಕ ರಾಜ್ಯದ ಮುಂದೆ ಸತ್ಯಾಂಶ ಇಡಲಿದ್ದಾರೆ ಎಂದು ತಿಳಿಸಿದ್ದಾರೆ.