ನವ ದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ನಿಯೋಗ ಇಂದು (ಮಂಗಳವಾರ) ಭೇಟಿ ಮಾಡಿದೆ.
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ್ಯ ಮಾಡಲಾಗುತ್ತಿದೆ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಇತ್ತೀಚೆಗಷ್ಟೇ ರಾಜ್ಯ ಬಿಜೆಪಿ ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ ನಡೆಸಿದೆ. ಪ್ರಕರಣವನ್ನು ಎನ್.ಐ.ಎ ಗೆ ವಹಿಸುವಂತೆ ಆಗ್ರಹಿಸಿತ್ತು. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ್ಯಕ್ಕೆ ವಿದೇಶಗಳಿಂದ ಹಣದ ಹೊಳೆ ಹರಿಯುತ್ತಿದೆ ಎಂದೂ ಆರೋಪಿಸಿತ್ತು. ಈ ಬಗ್ಗೆ ಇ.ಡಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿತ್ತು.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಯೋಗ, ಅಮಿತ್ ಶಾ ಅವರನ್ನು ಭೇಟಿ ಮಾಡಿದೆ. ಭೇಟಿಯ ಸಂದರ್ಭದಲ್ಲಿ ಧರ್ಮಸ್ಥಳದ ವಿಚಾರಕ್ಕೆ ಸಂಬಂಧಿಸಿದಂತೆ ಶಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಎಸ್.ಆರ್. ವಿಶ್ವನಾಥ್, ಹರೀಶ್ ಪೂಂಜಾ ಮತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭಾಗಿಯಾಗಿದ್ದರು.