ಬೆಂಗಳೂರು: ಧರ್ಮಸ್ಥಳದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಮಾಡುವುದನ್ನು ತಡೆಹಿಡಿದಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಈ ಮಹತ್ವದ ನಿರ್ಧಾರದ ಮೂಲಕ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಕ್ತವಾಗಿ ವರದಿ ಮಾಡಲು ಮಾಧ್ಯಮಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಡಿ. ಹರ್ಷೇಂದ್ರ ಕುಮಾರ್ ಅವರ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜುಲೈ 8, 2025 ರಂದು ನೀಡಿದ್ದ ಏಕಪಕ್ಷೀಯ ಪ್ರತಿಬಂಧಕ ಆದೇಶವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿ ಆದೇಶಿಸಿದೆ. ಈ ಆದೇಶವು ಪತ್ರಿಕಾ ಸ್ವಾತಂತ್ರ್ಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
ದಕ್ಷಿಣ ಕನ್ನಡದ ‘ಕುಡ್ಲ ರ‍್ಯಾಂಪೇಜ್’ ಯೂಟ್ಯೂಬ್ ಚಾನೆಲ್‌ನ ಪ್ರಧಾನ ಸಂಪಾದಕ ಅಜಯ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಈ ಆದೇಶವನ್ನು ಹೊರಡಿಸಿದೆ. ಅಲ್ಲದೆ, ಈ ಮಧ್ಯಂತರ ಅರ್ಜಿಯನ್ನು ಹೊಸದಾಗಿ ಮತ್ತು ನ್ಯಾಯಯುತವಾಗಿ ಪರಿಗಣಿಸುವಂತೆ ಪ್ರಕರಣವನ್ನು ಮತ್ತೆ ವಿಚಾರಣಾ ನ್ಯಾಯಾಲಯಕ್ಕೆ ಕಳುಹಿಸಲಾಗಿದೆ. ವಿಚಾರಣಾ ನ್ಯಾಯಾಲಯ ಈ ಆದೇಶದಲ್ಲಿರುವ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಹಾಗೂ ಮಧ್ಯಂತರ ಅರ್ಜಿಯನ್ನು ತುರ್ತಾಗಿ ನಿರ್ಧರಿಸಬೇಕು ಎಂದು ಹೈಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ.