ಬೆಂಗಳೂರು : ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಭಾರಿ ಮಹತ್ವದ ಹಾಗೂ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 28) ಬೆಳಗ್ಗೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿರುವ ಬೆನ್ನಲ್ಲೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಮಧ್ಯರಾತ್ರಿ ದಿಢೀರನೆ ಮುಂಬೈಗೆ ಪ್ರಯಾಣ ಬೆಳೆಸಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಬುಧವಾರ ತಡರಾತ್ರಿ 11:45 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ.
ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ ಅವರು ಇಂದು ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿದ್ದರು. ಇದಕ್ಕೆ ಸ್ಪಂದಿಸಿದ್ದ ಲೋಕಭವನ ಗುರುವಾರ ಬೆಳಗ್ಗೆ 11:30 ಕ್ಕೆ ಹಾಗೂ ಮಧ್ಯಾಹ್ನ 3 ಗಂಟೆಯ ನಂತರ ಭೇಟಿಗೆ ಅವಕಾಶವನ್ನೂ ಕಲ್ಪಿಸಿತ್ತು. ಸಿಎಂ ಭೇಟಿಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ರಾಜ್ಯಪಾಲರು ಮಧ್ಯರಾತ್ರಿಯೇ ರಾಜಧಾನಿ ತೊರೆದಿರುವುದು ಸಂಚಲನ ಮೂಡಿಸಿದೆ.
ರಾಜ್ಯಪಾಲರು ಇಂದೇ ಮುಂಬೈನಿಂದ ಮರಳಿ ಬರುತ್ತಾರಾ ಎನ್ನುವುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಒಂದು ವೇಳೆ ಮರಳಿ ಬಂದರೂ ಮಧ್ಯಾಹ್ನ 3 ಗಂಟೆಯ ನಂತರ ಸಿದ್ದರಾಮಯ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.
ಇದನ್ನೂ ಓದಿ : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಇ.ಡಿ ದಾಳಿ ಮಾಡಿದ್ದೇಕೆ?



















