ಬೆಂಗಳೂರು: ಕಾಂಗ್ರೆಸ್ ನಲ್ಲಿ ಪವರ್ ಶೇರಿಂಗ್ ಪೈಪೋಟಿ ಮುಸುಕಿನ ಗುದ್ದಾಟದ ವಿಷಯವಾಗಿದೆ. ಈ ವಿಷಯದಲ್ಲಿ ಹೈಕಮಾಂಡ್ ಖಡಕ್ ವಾರ್ನಿಂಗ್ ನೀಡಿದರೂ ಬೂದಿ ಮುಚ್ಚಿದ ಕೆಂಡದಂತ ವಾತಾವರಣ ಇದೆ. ಸಿಎಂ ಸಿದ್ದರಾಮಯ್ಯ ಸದನದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿರುವುದು ಮತ್ತೆ ಚರ್ಚೆಗೆ ಕಾರಣವಾಗಿದೆ. ಈ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್ ಶಾಸಕರಿಗಾಗಿ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ಖಾಸಗಿ ಹೊಟೇಲ್ ನಲ್ಲಿ ಎಲ್ಲ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಮಧ್ಯೆಯೂ ಡಿಕೆಶಿ ಔತಣಕೂಟ ಚರ್ಚೆ ಹುಟ್ಟು ಹಾಕುವಂತಿದೆ. ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ್ದನ್ನೇ ನೆಪವಾಗಿಟ್ಟುಕೊಂಡು ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮಾರ್ಚ್ 11ಕ್ಕೆ ಐದು ವರ್ಷ ಪೂರೈಸಲಿದೆ. ಅಲ್ಲದೇ, ಇತ್ತೀಚೆಗೆ ಡಿಕೆಶಿ ಪ್ರತಿ ಅಧಿವೇಶನ ಸಂದರ್ಭದಲ್ಲಿಯೂ ಡಿಕೆ ಶಿವಕುಮಾರ್ ಶಾಸಕರಿಗೆ ಡಿನ್ನರ್ ಆಯೋಜನೆ ಮಾಡುತ್ತಿದ್ದಾರೆ. ಈ ಬಾರಿಯ ಔತಣಕೂಟವಂತೂ ಭಾರೀ ಚರ್ಚೆಗೆ ಕಾರಣವಾಗುತ್ತಿದೆ.
ಮಾರ್ಚ್ 15 ರಂದು ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರಿಗೂ ಡಿನ್ನರ್ ಆಯೋಜನೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಡಿನ್ನರ್ ಪಾರ್ಟಿ ಯಾವ ಪಾಲಿಟಿಕ್ಸ್ ಕಾರಣವಾಗುತ್ತದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.