ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿಕೆಶಿ ಅವರು ಇಂದು ಆರು ವರ್ಷ ಪೂರ್ಣಗೊಂಡಿದೆ.

2020ರ ಮಾರ್ಚ್ 11ರಂದು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಡಿ.ಕೆ. ಶಿವಕುಮಾರ್ ಅಲಂಕರಿಸಿದ್ದರು. ಬಳಿಕ ಸತತ ಆರು ವರ್ಷಗಳ ಕಾಲ ಅವರು ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಮುನ್ನಡೆಸುತ್ತಾ ಬಂದಿದ್ದಾರೆ.

ಈ ಅವಧಿಯಲ್ಲಿ ಡಿಕೆಶಿ ಅವರು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದ್ದರು. ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಇಂದು ಸಂಜೆ ನಗರದಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕರಿಗೆ ಔತಣಕೂಟವನ್ನು ಆಯೋಜಿಸಲಾಗಿದೆ.

ಈ ಔತಣಕೂಟಕ್ಕೆ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಸಚಿವರು ಹಾಗೂ ಪಕ್ಷದ ಎಲ್ಲಾ ಶಾಸಕರಿಗೂ ಆಹ್ವಾನ ನೀಡಲಾಗಿದೆ. ಅಧಿಕಾರ ಹಂಚಿಕೆ ಕುರಿತು ಚರ್ಚೆಗಳ ನಡುವೆಯೇ ಡಿಕೆ ಶಿವಕುಮಾರ್ ಎಲ್ಲಾ ಶಾಸಕರನ್ನು ಆಹ್ವಾನಿಸಿರುವುದು ವಿಶೇಷ ಗಮನಸೆಳೆಯುತ್ತಿದೆ. ರಾಜಕೀಯ ವಲಯದಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡಿರುವ ಈ ಔತಣಕೂಟ ಕಾರ್ಯಕ್ರಮದತ್ತ ಎಲ್ಲರ ಗಮನ ಸೆಳೆದಿದೆ.
ಇದನ್ನೂ ಓದಿ : ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!



















