ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗೆಗಿನ ಊಹಾಪೋಹಗಳಿಗೆ ಇಂಬು ನೀಡಿದೆ.
ಪಕ್ಷದೊಳಗಿನ ಮುಖ್ಯಮಂತ್ರಿ ಪದವಿ ಹಂಚಿಕೆಯ ‘ಒಪ್ಪಂದ’ದ ಆಧಾರದ ಮೇಲೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುತ್ತಿದ್ದಾರೆ ಎಂಬ ವರದಿಗಳ ನಡುವೆ ಈ ಭೇಟಿ ನಡೆದಿದೆ.
ಪ್ರಿಯಾಂಕಾ ಗಾಂಧಿ ಅವರೊಂದಿಗೆ ಯಾವೆಲ್ಲ ವಿಚಾರಗಳ ಬಗ್ಗೆ ಚರ್ಚಿಸಲಾಯಿತು ಎಂಬುದರ ಕುರಿತು ಡಿಕೆ ಶಿವಕುಮಾರ್ ಯಾವುದೇ ಮಾಹಿತಿ ನೀಡಲಿಲ್ಲ. ‘ನಾನು ಅಲ್ಲಿಗೆ ಭೇಟಿ ನೀಡಿದ್ದೆ’ ಎಂದಷ್ಟೇ ಹೇಳಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ನಂತರ ಅಧಿಕಾರ ಹಂಚಿಕೆ ಮಾತುಕತೆಯಾಗಿದ್ದು, ಅದರಂತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಎರಡೂವರೆ ವರ್ಷದ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿತ್ತು.
ಇಬ್ಬರೂ ನಾಯಕರು ಅಂತಹ ಯಾವುದೇ ಔಪಚಾರಿಕ ಒಪ್ಪಂದವನ್ನು ಸಾರ್ವಜನಿಕವಾಗಿ ನಿರಾಕರಿಸಿದ್ದರೂ, ಪಕ್ಷದ ವಲಯಗಳಲ್ಲಿ ಈ ಬಗ್ಗೆ ಸಾಕಷ್ಟು ಊಹಾಪೋಹಗಳು ಮುಂದುವರೆದಿವೆ.


















