ಮುಂಬೈ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಯುವ ವೈದ್ಯೆಯೊಬ್ಬಳು ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಸಾವಿಗೂ ಮುನ್ನ ಆಕೆ ತನ್ನ ಅಂಗೈಯಲ್ಲೇ ಡೆತ್ ನೋಟ್ ಬರೆದು ಪೊಲೀಸ್ ಅಧಿಕಾರಿಗಳ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ.
ಸತಾರಾ ಜಿಲ್ಲೆಯ ಫಲ್ಟಾನ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಡಾ. ಸಂಪದಾ ಮುಂಡೆ ಮೃತ ವೈದ್ಯೆ. ಇವರು ತಮ್ಮ ಅಂಗೈಯಲ್ಲಿ ಪೆನ್‌ನಿಂದ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಗೋಪಾಲ್ ಬಡನೆ ಅವರು ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ. ಮತ್ತೊಬ್ಬ ಪೊಲೀಸ್ ಅಧಿಕಾರಿ ಪ್ರಶಾಂತ್ ಬಂಕರ್ ಅವರು ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.
ದೂರು ನೀಡಿದರೂ ಕ್ರಮ ಕೈಗೊಂಡಿರಲಿಲ್ಲ
ವೈದ್ಯಕೀಯ ಪರೀಕ್ಷಾ ಕಾರ್ಯವಿಧಾನಗಳಿಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ನಡುವೆ ನಡೆಯುತ್ತಿದ್ದ ವಿವಾದದಲ್ಲಿ ಡಾ. ಸಂಪದಾ ಸಿಲುಕಿಕೊಂಡಿದ್ದರು. ಈ ವಿವಾದದ ಹಿನ್ನೆಲೆಯಲ್ಲಿ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನೂ ಆರಂಭಿಸಲಾಗಿತ್ತು.
ವಿಚಾರಣೆ ವೇಳೆ, ತಮಗೆ ಅನ್ಯಾಯವಾಗುತ್ತಿದೆ ಎಂದು ಡಾ. ಸಂಪದಾ ತಮ್ಮ ಹಿರಿಯ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದರು. “ಕಿರುಕುಳ ಮುಂದುವರಿದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ” ಅವರು ಆ ಪತ್ರದಲ್ಲಿ ಎಚ್ಚರಿಸಿದ್ದರು. ಆದರೆ, ಹಲವು ಬಾರಿ ದೂರು ನೀಡಿದರೂ ಹಿರಿಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಅವರ ಸಹೋದ್ಯೋಗಿಗಳು ಆರೋಪಿಸಿದ್ದಾರೆ.
ತನಿಖೆ ಆರಂಭ
ಘಟನೆ ಬೆಳಕಿಗೆ ಬಂದ ನಂತರ, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಡೆತ್ ನೋಟ್‌ನಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ವಿಧಿವಿಜ್ಞಾನ ಮತ್ತು ಡಿಜಿಟಲ್ ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ತನಿಖೆ ನಡೆಸಲಾಗುವುದು ಎಂದು ಸತಾರಾ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ಈ ಘಟನೆಯು ವೈದ್ಯಕೀಯ ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.



















