ಬೆಂಗಳೂರು : ಥೈಲ್ಯಾಂಡ್‌ನಿಂದ ಬೆಂಗಳೂರಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಕೇರಳ ಡ್ರಗ್ ಪೆಡ್ಲರ್‌ಗಳನ್ನು ಭರ್ಜರಿ ಕಾರ್ಯಾಚರಣೆ ನಡೆಸಿ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಅಮೃತಹಳ್ಳಿ ಪೊಲೀಸರು ಬೃಹತ್ ಡ್ರಗ್ಸ್ ಜಾಲವೊಂದನ್ನು ಭೇದಿಸಿ, ಒಟ್ಟು ಹತ್ತು ಮಂದಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ 4 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ. ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು, ಡಾರ್ಕ್‌ವೆಬ್ ಬಳಸಿ ಬೆಂಗಳೂರಿನಾದ್ಯಂತ ಮಾರಾಟ ಮಾಡಲಾಗುತ್ತಿತ್ತು.
ಬಂಧಿತ ಆರೋಪಿಗಳನ್ನು ಕುಶಾಲ್, ಸಾಗರ್, ಶಶಾಂಕ್, ವಿಲ್ಸನ್, ಆಶೀರ್ ಅಲಿ, ಸಜ್ಜದ್, ರಿಯಾಜ್, ಶಿಯಾಬ್, ನಿಸಾರ್ ಮತ್ತು ಅಭಿನವ್ ಎಂದು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಕರ್ನಾಟಕ ಮೂಲದವರಾಗಿದ್ದು, ಉಳಿದ ಎಂಟು ಮಂದಿ ಕೇರಳ ರಾಜ್ಯಕ್ಕೆ ಸೇರಿದವರಾಗಿದ್ದಾರೆ.
ಆರೋಪಿಗಳು ಡಾರ್ಕ್‌ವೆಬ್‌ನಲ್ಲಿ ‘ಟೀಂ ಕಲ್ಕಿ’ ಎಂಬ ವೆಬ್‌ಸೈಟ್ ಮೂಲಕ ಡ್ರಗ್ಸ್‌ಗಾಗಿ ಆರ್ಡರ್ ಮಾಡುತ್ತಿದ್ದರು. ಥೈಲ್ಯಾಂಡ್‌ನಲ್ಲಿರುವ ಕೇರಳ ಮೂಲದ ವ್ಯಕ್ತಿಯೊಬ್ಬ ವಿಮಾನದ ಮೂಲಕ ಬೆಂಗಳೂರಿಗೆ ಡ್ರಗ್ಸ್ ಕಳುಹಿಸುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.
ಬೆಂಗಳೂರಿಗೆ ಡ್ರಗ್ಸ್ ತಲುಪಿದ ನಂತರ, ಆರೋಪಿಗಳು ನಗರದಾದ್ಯಂತ ಡ್ರಗ್ಸ್ ವಿತರಿಸುತ್ತಿದ್ದರು. ಯಲಹಂಕ, ಹೆಬ್ಬಾಳ, ಕೋರಮಂಗಲ, ಬೆಳ್ಳಂದೂರು ಸೇರಿದಂತೆ ವಿವಿಧ ಪ್ರದೇಶಗಳನ್ನು ಹಂಚಿಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳು ಮತ್ತು ಪಾರ್ಟಿಗಳಿಗೆ ಬರುವವರೇ ಇವರ ಪ್ರಮುಖ ಗಿರಾಕಿಗಳಾಗಿದ್ದರು ಎಂದು ತಿಳಿದುಬಂದಿದೆ.
ಬಂಧಿತರಿಂದ 3 ಕೆಜಿ ಹೈಡ್ರೋ ಗಾಂಜಾ, 500 ಎಲ್‌ಎಸ್‌ಡಿ ಸ್ಟ್ರಿಪ್ಸ್, 10 ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಎರಡು ಕಾರುಗಳು ಮತ್ತು 10 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಮುಖ್ಯ ಆರೋಪಿ ನಾಪತ್ತೆಯಾಗಿದ್ದು, ಅಮೃತಹಳ್ಳಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಇನ್ನು ತಲಘಟ್ಟಪುರ ಪೊಲೀಸರು ಕಾರ್ಯಾಚರಣೆ ನಡೆಸಿ 60 ಲಕ್ಷ ಮೌಲ್ಯದ 78 ಕೆಜೆ ಗಾಂಜಾ ಸೀಜ್ ಮಾಡಿದ್ದಾರೆ.
ಇದನ್ನೂ ಓದಿ : “ಪಾಕ್ ವಿಶ್ವಕಪ್‌ಗೆ ಬರದಿದ್ರೆ ನಾವು ರೆಡಿ” | ಪಿಸಿಬಿ ನಾಟಕಕ್ಕೆ ಐಸ್‌ಲ್ಯಾಂಡ್ ಕ್ರಿಕೆಟ್ ಭರ್ಜರಿ ಟ್ರೋಲ್!



















