ಬೆಂಗಳೂರು: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ಪರಿಣಾಮ ದೊಡ್ಡ ಅನಾಹುತವೇ ನಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಬನ್ನೇರುಘಟ್ಟ (Bannerughatta) ಹತ್ತಿರದ ರಾಗಿಹಳ್ಳಿ ಹತ್ತಿರ ನಡೆದಿದೆ. ಕುಡಿದು ಕಾರು ಚಲಾಯಿಸಿದ ಪರಿಣಾಮ ಕಾರು ಮರಕ್ಕೆ ಡಿಕ್ಕಿ (Accident) ಹೊಡೆದಿದೆ. ಪರಿಣಾಮ ಇಬ್ಬರು ವಿದ್ಯಾರ್ಥಿಗಳು (Students) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೇರಳ ಮೂಲದ ಸಹಾಹುಕ್ (28) ಮತ್ತು ಅರ್ಶು (23) ಸಾವನ್ನಪ್ಪಿರುವ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ದೇವ ನಾರಾಯಣ (23) ಮತ್ತು ಸಾಹಿಲ್ (23) ಎಂದು ಗುರುತಿಸಲಾಗಿದೆ. ನಾಲ್ವರು ಗೊಟ್ಟಿಗೆರೆಯ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ನಾಲ್ವರೂ ಮಧ್ಯರಾತ್ರಿ ಕಂಠಪೂರ್ತಿ ಮದ್ಯ ಸೇವಿಸಿದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.