ನವದೆಹಲಿ: ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಅವರು ಟಿಕೆಟ್ ಘೋಷಿಸಿದ್ದಾರೆ. ಈ ಕ್ಷೇತ್ರಕ್ಕೆ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಪುತ್ರಿಯ ಹೆಸರು ಕೇಳಿ ಬಂದಿತ್ತು. ಆದರೆ, ಹೈಕಮಾಂಡ್ ಕೊನೆಗೆ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಮತ್ತೊಮ್ಮೆ ಅವಕಾಶ ಮಾಡಿಕೊಟ್ಟಿದೆ.
ಹಾನಗಲ್ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್ ಅಹ್ಮದ್ ಖಾನ್ ಪಠಾಣ್ , ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸೋತಿದ್ದರು. ಈಗ ಉಪಚುನಾವಣೆಯಲ್ಲೂ ಕಾಂಗ್ರೆಸ್, ಹೈಕಮಾಂಡ್ ಯಾಸೀರ್ ಅಹ್ಮದ್ ಖಾನ್ ಪಠಾಣ್ ಗೆ ಟಿಕೆಟ್ ನೀಡಿದೆ.
ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ಗಾಗಿ ಕಾಂಗ್ರೆಸ್ನಲ್ಲಿ ಭಾರಿ ಪೈಪೋಟಿ ನಡೆದಿತ್ತು. ಕಳೆದ ಐದು ಚುನಾವಣೆಗಳಲ್ಲೂ ಸಹ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲಾಗಿದ್ದು, ಈ ಬಾರಿ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಕೂಗಿತ್ತು. ಆದರೆ, ಹೈಕಮಾಂಡ್ ಈ ಬಾರಿಯೂ ಮುಸ್ಲಿಂ ಸಮುದಾಯಕ್ಕೆ ಮನೆ ಹಾಕಿದೆ.
ಅಲ್ಪಸಂಖ್ಯಾತ ಸಮುದಾಯದಿಂದ ಅಜ್ಜಂಫೀರ್ ಖಾದ್ರಿ ಹಾಗೂ ಯಾಸೀರ್ ಖಾನ್ ಪಠಾಣ್ ನಡುವೆ ಭಾರೀ ಪೈಪೋಟಿ ಇತ್ತು. ಲಿಂಗಾಯತ ಸಮುದಾಯದಿಂದ ಸಂಜೀವ್ ನೀರಲಗಿ , ಸೋಮಣ್ಣ ಬೇವಿನಮರ ಹೆಸರು ಕೇಳಿ ಬಂದಿದ್ದವು.