ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮೊಟ್ಟೆ ಸೇವನೆಯ ಕುರಿತು ಸಾರ್ವಜನಿಕರಲ್ಲಿ ಮೂಡಿದ್ದ ಆತಂಕಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶಗಳಿವೆ ಎಂಬ ವದಂತಿಗಳು ಸಂಪೂರ್ಣವಾಗಿ ಸುಳ್ಳು ಎಂದು ಅವರು ಹೇಳಿಕೆ ನೀಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಂಗ್ರಹಿಸಿದ ಮೊಟ್ಟೆಗಳನ್ನು ಲ್ಯಾಬ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಪ್ರಕಾರ ಮೊಟ್ಟೆ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಜಿಲ್ಲಾ ಪ್ರವಾಸದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, “ಮೊಟ್ಟೆಯಲ್ಲಿ ಅಪಾಯಕಾರಿ ಅಂಶಗಳಿವೆ ಎಂಬ ಸುದ್ದಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ಗಂಭೀರವಾಗಿ ಕ್ರಮ ಕೈಗೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ರವಾನೆ ಮಾಡಲಾಗಿತ್ತು. ಇದೀಗ ವರದಿ ಬಂದಿದ್ದು, ಮೊಟ್ಟೆಯಲ್ಲಿ ಯಾವುದೇ ರೀತಿಯ ಕ್ಯಾನ್ಸರ್‌ಕಾರಕ ಅಂಶಗಳು ಇಲ್ಲ ಎಂಬುದು ಸ್ಪಷ್ಟವಾಗಿದೆ. ಮೊಟ್ಟೆ ಸೇವನೆ ಸಂಪೂರ್ಣವಾಗಿ ಸುರಕ್ಷಿತ” ಎಂದು ಹೇಳಿದರು.
ಮೊಟ್ಟೆ ಸೇವನೆ ಕುರಿತು ಜನರಲ್ಲಿ ಭಯ ಮೂಡಿಸುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಹರಡಲಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. “ಎಫ್‌ಎಸ್‌ಎಸ್‌ಎಐ (FSSAI) ಸಂಸ್ಥೆಯೂ ಸಹ ಮೊಟ್ಟೆ ಸುರಕ್ಷಿತವೆಂದು ದೃಢಪಡಿಸಿದೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ಮೊಟ್ಟೆಯನ್ನು ನಿರ್ಬಂಧವಿಲ್ಲದೆ ಸೇವಿಸಬಹುದು” ಎಂದು ದಿನೇಶ್ ಗುಂಡೂರಾವ್ ಭರವಸೆ ನೀಡಿದರು.
ಮೊಟ್ಟೆ ಪ್ರೋಟೀನ್ ಸಮೃದ್ಧ ಆಹಾರವಾಗಿದ್ದು, ಮಕ್ಕಳಿಂದ ಹಿಡಿದು ವೃದ್ಧರವರೆಗೂ ಆರೋಗ್ಯಕ್ಕೆ ಬಹುಮುಖ್ಯ ಎಂದು ಅವರು ಹೇಳಿದರು. ಅನಗತ್ಯ ವದಂತಿಗಳಿಂದ ಜನರು ಪೌಷ್ಟಿಕ ಆಹಾರವನ್ನು ದೂರವಿಡುವುದು ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿ ಎಂದು ಎಚ್ಚರಿಸಿದರು.
ಇದೇ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಸೇವೆ ಕಡಿತಗೊಳಿಸುವ ವಿಚಾರದ ಕುರಿತೂ ಸಚಿವರು ಸ್ಪಷ್ಟನೆ ನೀಡಿದರು. “ಕೆಲವು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳ ಸಂಖ್ಯೆ ಕಡಿಮೆಯಿದೆ. ಅಂತಹ ಕೇಂದ್ರಗಳಲ್ಲಿ ಸ್ಪೆಷಲಿಸ್ಟ್ ವೈದ್ಯರನ್ನು ತಾತ್ಕಾಲಿಕವಾಗಿ ಶಿಫ್ಟ್ ಮಾಡಲಾಗುತ್ತದೆ. ಆದರೆ ಯಾವುದೇ ಸಮುದಾಯ ಆರೋಗ್ಯ ಕೇಂದ್ರವನ್ನು ಮುಚ್ಚುವುದಿಲ್ಲ” ಎಂದು ಅವರು ತಿಳಿಸಿದರು.
ಸ್ಪೆಷಲಿಸ್ಟ್ ವೈದ್ಯರನ್ನು ಶಿಫ್ಟ್ ಮಾಡಿದ ಬಳಿಕ, ಆ ಕೇಂದ್ರಗಳಲ್ಲಿ ಇಬ್ಬರು ಎಂಬಿಬಿಎಸ್ ವೈದ್ಯರನ್ನು ನಿಯೋಜಿಸಲಾಗುವುದು. ಇದರಿಂದ ಸ್ಥಳೀಯ ಜನರಿಗೆ 24 ಗಂಟೆಗಳ ವೈದ್ಯಕೀಯ ಸೇವೆ ಮುಂದುವರಿಯಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. “ಸಮುದಾಯ ಆರೋಗ್ಯ ಕೇಂದ್ರಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತವೆ. ಜನಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ” ಎಂದು ಅವರು ಹೇಳಿದರು.
ಇದನ್ನೂ ಓದಿ : ಮೈಸೂರು ಪ್ಯಾಲೇಸ್ ಮುಂಭಾಗ ಸ್ಫೋಟ | ಸಾವಿನ ಸಂಖ್ಯೆ 2ಕ್ಕೆ ಏರಿಕೆ!



















