ಕೋಲಾರ : ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ದಿನಾಂಕ ನಿಗದಿ ಮಾಡಿ ಕರ್ನಾಟಕ ಚುನಾವಣಾ ಆಯೋಗವು, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಕೋಲಾರ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ. ಇದೇ ನವೆಂಬರ್ 11ರಂದು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತೆಣಿಕೆ ನಡೆಸಲು ಸೂಚಿಸಿದೆ.
ಮಾಲೂರು ವಿಧಾನಸಭೆ ಕ್ಷೇತ್ರದ ಮರು ಮತ ಎಣಿಕೆಗೆ ಆಗ್ರಹಿಸಿ ಕೋರ್ಟ್ ಮೆಟ್ಟಿಲೇರಿದ್ದ ಪರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ, ತಹಶೀಲ್ದಾರ್ ಕೆಲ ಚುನಾವಣಾ ಸಾಮಗ್ರಿಗಳನ್ನು ಅಕ್ರಮವಾಗಿ ವಶಕ್ಕೆ ಪಡೆದಿರುವ ಬಗ್ಗೆ ಧ್ವನಿ ಎತ್ತಿದ್ದರು. ಅಲ್ಲದೇ, ಈ ಬಗ್ಗೆ ಪತ್ರ ಬರೆದು ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದರು.
ಇದರ ಬೆನ್ನಲ್ಲೇ ಇದೀಗ ಚುನಾವಣೆ ಆಯೋಗವು ಸಹ ಕೋಲಾರ ಜಿಲ್ಲಾಧಿಕಾರಿಗೆ ಹಾಗೂ ಜಿಲ್ಲಾ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ನವೆಂಬರ್ 11ರಂದು ಮರ ಮತ ಎಣಿಕೆ ಮಾಡುವಂತೆ ಸೂಚಿಸಿದೆ.
ಪ್ರಕರಣದ ಹಿನ್ನೆಲೆ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ 15 ಮಂದಿ ಸ್ಪರ್ಧಿಗಳ ಏಜೆಂಟ್ಗಳಿಗೆ ಮತ ಎಣಿಕೆ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ. ಒಂದೇ ಕೊಠಡಿಯಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಬೇಕಿದ್ದು, ಎರಡು ಪ್ರತ್ಯೇಕ ಕೊಠಡಿಯಲ್ಲಿ ಎಣಿಕೆ ಮಾಡಲಾಗಿದೆ. ಆ ಮೂಲಕ ಜನಪ್ರತಿನಿಧಿಗಳ ಕಾಯ್ದೆಯ ನಿಯಮಗಳು ಮತ್ತು ಚುನಾವಣಾ ಆಯೋಗ ಪ್ರಕಟಿಸಿದ್ದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಹೀಗಾಗಿ, ನಂಜೇಗೌಡರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಚುನಾವಣಾ ಆಯೋಗದ ಕ್ರಮವನ್ನು ರದ್ದುಪಡಿಸಬೇಕು. ಅಷ್ಟೇ ಅಲ್ಲದೆ, ಕ್ಷೇತ್ರದ ಮತಗಳನ್ನು ಮರು ಎಣಿಕೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.
248 ಮತಗಳಿಂದ ಸೋತಿದ್ದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಮಂಜುನಾಥ್ ಗೌಡ: 2023ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ಮಂಜುನಾಥ್ ಗೌಡ ಅವರು ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ ಅವರ ವಿರುದ್ಧ 248 ಮತಗಳ ಅಂತರದಿಂದ ಸೋತಿದ್ದರು.



















