ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯ ನೂತನ ಶವಾಗಾರಕ್ಕೆ ಪೇಂಟಿಂಗ್ ಮಾಡುವ ವೇಳೆ ವಿದ್ಯುತ್ ತಂತಿ ತಗುಲಿ ಪೇಂಟರ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಾಳುವನ್ನು ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಮಂಜುನಾಥ್ ಎಂದು ಗುರುತಿಸಲಾಗಿದೆ. ಐದು ದಿನಗಳ ಹಿಂದೆ ನವಲಗುಂದ ಸರ್ಕಾರಿ ಆಸ್ಪತ್ರೆಯ ನೂತನ ಶವಾಗಾರಕ್ಕೆ ಪೇಂಟಿಂಗ್ ಕೆಲಸಕ್ಕೆ ತೆರಳಿದ್ದ ವೇಳೆ ಆಸ್ಪತ್ರೆ ಪಕ್ಕದಿಂದ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ತೀವ್ರ ವಿದ್ಯುತ್ ಶಾಕ್ ಉಂಟಾಗಿದೆ. ಈ ಶಾಕ್‌ನಿಂದ ಮಂಜುನಾಥ್ ಅವರ ದೇಹದ ಹಲವು ಭಾಗಗಳು ಸುಟ್ಟಿದ್ದು, ಅವರು ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಬಳಿಕ ಗುತ್ತಿಗೆದಾರ ಬಸವರಾಜ್ ಗಾಯಾಳುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ತೆರಳಿದ್ದು, ನಂತರ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಸಂಪರ್ಕಕ್ಕೆ ಸಿಗದೆ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಮಂಜುನಾಥ್ ಅವರ ತಂದೆ ದೇವಪ್ಪ ನವಲಗುಂದ ಪೊಲೀಸ್ ಠಾಣೆಯಲ್ಲಿ ಗುತ್ತಿಗೆದಾರ ಬಸವರಾಜ್ ವಿರುದ್ಧ ದೂರು ದಾಖಲಿಸಿದ್ದಾರೆ. ಹಾಜರಿ ಹಾಕಿಸಿ ವಾಪಸ್ ಬರೋಣ ಎಂದು ಹೇಳಿ ಕೆಲಸಕ್ಕೆ ಕರೆದುಕೊಂಡು ಹೋಗಿದ್ದ ಗುತ್ತಿಗೆದಾರ, ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ನವಲಗುಂದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



















