ಬೆಂಗಳೂರು ಗ್ರಾಮಾಂತರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭೂ ಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ಕೆಐಎಡಿಬಿ ವತಿಯಿಂದ ಐದು ಗ್ರಾಮಗಳಾದ ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ, ಚಿಕ್ಕಬೆಳವಂಗಲ ಹಾಗೂ ದೊಡ್ಡಬೆಳವಂಗಲ ಗ್ರಾಮಗಳ ಸುಮಾರು 2100 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ನೋಟಿಸ್ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿ ಚಿಕ್ಕಬೆಳವಂಗಲದಿಂದ ಜಾತಾ ಹೊರಡುವ ಮೂಲಕ ಪ್ರತಿಭಟನೆ ನಡೆಸಿದರು. ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿ, ಭೂ ಸ್ವಾಧೀನವನ್ನು ತಕ್ಷಣ ಕೈಬಿಡುವಂತೆ ಆಗ್ರಹಿಸಿದ್ದಾರೆ.
ಈಗಾಗಲೇ “ಕ್ವಿನ್ ಸಿಟಿ” ಯೋಜನೆಗಾಗಿ ಸಾವಿರಾರು ಎಕರೆ ಜಮೀನು ಸ್ವಾಧೀನ ಮಾಡಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ಮತ್ತೆ ಭೂ ಸ್ವಾಧೀನಕ್ಕೆ ಮುಂದಾಗಿರುವುದರಿಂದ ಜೀವನೋಪಾಯ ಕಳೆದುಕೊಳ್ಳುವ ಭೀತಿ ಎದುರಾಗಿದೆ ಎಂದು ಅವರು ತಿಳಿಸಿದ್ದಾರೆ.
ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಚಿತ್ರದುರ್ಗ : ಅಂಗಡಿ ವರ್ತಕರಿಗೆ ಶಾಕ್ ನೀಡಿದ ನಗರಸಭೆ ಅಧಿಕಾರಿಗಳು..!


















