ಬೆಂಗಳೂರು : ನಗರದ ಫ್ರೇಜರ್ ಟೌನ್ ಸಮೀಪದ ಆಸಯ್ಯೇ (ASSAYE) ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಜೂನ್ 16ರಂದು ನಡೆದ ಈ ಘಟನೆಯ ವಿಡಿಯೋ ಇದೀಗ ವೈರಲ್ ಆಗಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ನಾಲ್ಕೈದು ಜನರ ತಂಡವೊಂದು ಓರ್ವ ಯುವಕನನ್ನು ಕೈ ಮತ್ತು ಕಾಲುಗಳಿಂದ ಹಿಗ್ಗಾಮುಗ್ಗಾ ಥಳಿಸುತ್ತಿರುವ ದೃಶ್ಯಗಳು ಕಂಡುಬಂದಿವೆ. ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಹಾಗೂ ಯಾವ ಕಾಲೇಜಿನ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆಯುತ್ತಿದೆ.
ಈ ಘಟನೆ ಪುಲಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಪ್ರಕರಣದ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ. ಹಲ್ಲೆಗೆ ಒಳಗಾದ ವಿದ್ಯಾರ್ಥಿಯನ್ನು ಸಂಪರ್ಕಿಸಿ ದೂರು ಪಡೆಯುವ ಪ್ರಯತ್ನವೂ ನಡೆಯುತ್ತಿದೆ.
ಸಂತ್ರಸ್ತ ವಿದ್ಯಾರ್ಥಿಯಿಂದ ದೂರು ಬಂದ ಬಳಿಕ ಪ್ರಕರಣ ದಾಖಲಿಸಿಕೊಂಡು ಹಲ್ಲೆಯಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!


















