ವಿಜಯನಗರ: ಕಬ್ಬಿನ ಗದ್ದೆಗೆ ವಿದ್ಯುತ್ ಲೈನ್ ತುಂಡಾಗಿ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಟೀ ನಿಂಗಪ್ಪ ಎಂಬ ರೈತರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ಲೈನ್ ತುಂಡಾಗಿ ಬಿದ್ದಿದ್ದು, ಇದರಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಕಬ್ಬಿನ ಬೆಳೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಘಟನೆಯಿಂದ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.


















