ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಕನಕಪುರ ಮುಖ್ಯ ರಸ್ತೆಯ ಯೆಲಚೇನಹಳ್ಳಿಯಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಸಂಕೀರ್ಣದ ನೆಲಮಾಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ 19 ಎಲೆಕ್ಟ್ರಿಕ್ ಸ್ಕೂಟರ್‌ಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿದೆ.
ಮೆಟ್ರೋ ನಿಲ್ದಾಣದ ಬಳಿಯ ಕಮರ್ಷಿಯಲ್ ಕಟ್ಟಡದ ನೆಲಮಹಡಿಯಲ್ಲಿ ಸ್ಥಾಪಿಸಲಾಗಿದ್ದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ. ಚಾರ್ಜಿಂಗ್ ವೇಳೆ ಓವರ್‌ಹೀಟ್‌ನಿಂದಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ ಎನ್ನಲಾಗಿದ್ದು, ನಂತರ ಪಾರ್ಕಿಂಗ್ ಪ್ರದೇಶದಲ್ಲಿದ್ದ ಗ್ಯಾಸ್ ಲೈನ್‌ಗೂ ಬೆಂಕಿ ವ್ಯಾಪಿಸಿದೆ. ಈ ವೇಳೆ ಒಂದು ಸಿಲಿಂಡರ್ ಸ್ಫೋಟಗೊಂಡಿದ್ದು, ಅದರ ತೀವ್ರತೆಗೆ ಅಗ್ನಿ ದುರಂತ ಸಂಭವಿಸಿದೆ.
ಪರಿಣಾಮ ವಾಹನ ನಿಲುಗಡೆ ಪ್ರದೇಶದಲ್ಲೇ ಇಟ್ಟಿದ್ದ ಗ್ಯಾಸ್ ಸಿಲಿಂಡರ್‌ಗೆ ಕಿಡಿ ತಾಕಿದ್ದರಿಂದ ಸಿಡಿದು ಬೆಂಕಿ ಜ್ವಾಲೆ ಧಗಧಗಿಸಿದೆ. ಸಿಬ್ಬಂದಿಯು ತಕ್ಷಣವೇ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.