ಈಜಿಪ್ಟ್: ರಾಜಧಾನಿ ಕೈರೋ ಸಮೀಪದ ರಿಂಗ್ ರೋಡ್ ಹೆದ್ದಾರಿಯಲ್ಲಿ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ಕನಿಷ್ಠ 31 ಮಂದಿ ಮೃತಪಟ್ಟಿದ್ದು, 21 ಜನರು ಗಾಯಗೊಂಡಿದ್ದಾರೆ. ಬುಧವಾರ ಗಿಜಾ ಪ್ರಾಂತ್ಯದ ಅಲ್-ವಾರಕ್ ಪ್ರದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಸಾಗಿಸುತ್ತಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಬೆನ್ನಲ್ಲೇ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಸುತ್ತಮುತ್ತಲಿನ ವಾಹನಗಳಿಗೂ ವ್ಯಾಪಿಸಿದೆ.
ಈ ಭೀಕರ ಅಪಘಾತದಲ್ಲಿ ಕಾರುಗಳು, ಮಿನಿ ಬಸ್ಗಳು ಮತ್ತು ಮೋಟಾರ್ಸೈಕಲ್ಗಳು ಸೇರಿದಂತೆ ಸುಮಾರು 27ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ 39 ಆಂಬ್ಯುಲೆನ್ಸ್ಗಳ ಮೂಲಕ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿವೆ. ಮೃತದೇಹಗಳ ಗುರುತು ಪತ್ತೆಗೆ ಡಿಎನ್ಎ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದ್ದು, ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.


















