ಧಾರವಾಡ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಸಂಪುಟ ನಿರ್ಧಾರ ಮಾಡಿದೆ. ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕ ಮಾಡಿ ಮಹಾನಗರ ಪಾಲಿಕೆ ರಚಿಸಲು ನಿರ್ಧಾರಿಸಲಾಗಿದೆ.
ಹೀಗಾಗಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಸಂಭ್ರಮಾಚರಣೆ ನಡೆದಿದೆ. ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿಯಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಗಿದೆ.
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಬೇಕೆಂಬ ಒತ್ತಾಯ ಹಲವು ವರ್ಷಗಳಿಂದಲೂ ಕೇಳಿ ಬರುತ್ತಿತ್ತು. ಧಾರವಾಡದ ಜನಸಂಖ್ಯೆ 6.5 ಲಕ್ಷ ದಾಟಿರುವುದರಿಂದ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕೆಂದು ಧಾರವಾಡದ ಜನರು ಆಗ್ರಹಿಸಿದ್ದರು. ಪಾಲಿಕೆಯ ರಚನೆಗೆ 3.5 ಲಕ್ಷ ಜನಸಂಖ್ಯೆಯ ಮೇಲಿರಬೇಕು. ಹೀಗಾಗಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆ ಮಾಡಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.