ಬೆಂಗಳೂರು: ಮಾಜಿ ಉಪಸಭಾಪತಿ, ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷ ಎನ್ ತಿಪ್ಪಣ್ಣ ಶುಕ್ರವಾರ ನಿಧನರಾಗಿದ್ದಾರೆ.
ತಿಪ್ಪಣ್ಣ ಅವರಿಗೆ 97 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬಳ್ಳಾರಿ ನಿವಾಸದಲ್ಲಿ ನೆಲೆಸಿದ್ದರು. ತಿಪ್ಪಣ್ಣ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇಂದು ಬಳ್ಳಾರಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹುಟ್ಟೂರು ಚಿತ್ರದುರ್ಗ ಜಿಲ್ಲೆ ತುರುವನೂರಿನಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ಎನ್ ತಿಪ್ಪಣ್ಣ ಅಂತ್ಯಕ್ರಿಯೆ ನಡೆಯಲಿದೆ.
ವಕೀಲರಾಗಿ ಹಲವು ವರ್ಷ ಕಾರ್ಯ ನಿರ್ವಹಿಸಿದ್ದ ತಿಪ್ಪಣ್ಣ, ಬಳಿಕ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದರು. 4 ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ವಿರೋಧ ಪಕ್ಷದ ಉಪ ನಾಯಕರಾಗಿದ್ದರು. ಅಲ್ಪ ಅವಧಿಗೆ ಸಭಾಪತಿಯಾಗಿ ಕೆಲಸ ಮಾಡಿದ್ದರು.
ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ತಿಪ್ಪಣ್ಣಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದು, ಬಳ್ಳಾರಿ ಜಿಲ್ಲೆಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವದಲ್ಲಿ ತಿಪ್ಪಣ್ಣ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು