ಬೆಂಗಳೂರು: ಪೋಕ್ಸೋ ಕಾಯ್ದೆ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಚಾರದಲ್ಲಿ ಪೊಲೀಸರಿಗೆ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್ ಮುಂದುವರಿಸಿದೆ.
ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಎಫ್ ಐಆರ್ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ ಆಕ್ಷೇಪ ಸಲ್ಲಿಸಲು ಕಾಲಾವಕಾಶ ಕೋರಿದ್ದಕ್ಕಾಗಿ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.
ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸರ್ಕಾರಿ ವಿಶೇಷ ಅಭಿಯೋಜಕರು, ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಈಗಾಗಲೇ ವಿಚಾರಣಾ ನ್ಯಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲ, ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಹೀಗಾಗಿ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಯಡಿಯೂರಪ್ಪ ಅವರನ್ನು ಬಂಧಿಸಬಾರದು. ಸಿಐಡಿ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಪೀಠ ನಿರ್ದೇಶಿಸಿತ್ತು. ಇಂತಹ ವ್ಯಕ್ತಿಯ ಬಗ್ಗೆ ತನಿಖೆ ನಡೆಸುವಾಗ ಪೊಲೀಸರ ನಡೆಯ ಬಗ್ಗೆ ಸಂಶಯ ಬಾರದಂತೆ ಮುಂದುವರಿಯಬೇಕು. ಪ್ರತಿಕಾರದ ಮೇಲೆ ನಡೆದುಕೊಳ್ಳಲಾಗುತ್ತಿದೆ ಎಂಬ ಭಾವನೆ ಕೋರ್ಟ್‌ಗೆ ಮೂಡಬಾರದು ಎಂದು ಆದೇಶಿಸಿತ್ತು. ಈಗ ಮತ್ತೆ ಬಂಧಿಸಿ ವಿಚಾರಣೆ ನಡೆಸದಂತೆ ಸೂಚಿಸಿದೆ.
