ಬೆಂಗಳೂರು: ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಶನಿವಾರ ಲೋಕಾಯುಕ್ತ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಲೋಕಾಯುಕ್ತದ ಪೊಲೀಸ್ ವಿಭಾಗವು ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ತನಿಖಾಧಿಕಾರಿಯ ಎದುರು ವಿಚಾರಣೆಗೆ ಹಾಜರಾಗಿದ್ದರು. ಕಾಂಗ್ರೆಸ್ ಸರ್ಕಾರ ಅಕ್ರಮ ಡಿನೋಟಿಫಿಕೇಶನ್ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧದ ತನಿಖೆಯನ್ನು ತ್ವರಿತಗೊಳಿಸುವಂತೆ ಲೋಕಾಯುಕ್ತರನ್ನು ಕೋರಿದ ನಂತರ ತನಿಖೆ ಚುರುಕುಗೊಂಡಿದೆ.
ಸಚಿವರಾದ ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್ ಹಾಗೂ ಸಂತೋಷ್ ಲಾಡ್ ಅವರು ಬೆಂಗಳೂರು ಉತ್ತರ ಕಸಬಾ ಹೋಬಳಿಯ ಗಂಗೇನಹಳ್ಳಿಯಲ್ಲಿ 1.11 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿರುವ ಕುರಿತು ದಾಖಲೆ ಬಿಡುಗಡೆ ಮಾಡಿದ್ದರು. 2007 ಮತ್ತು 2010ರ ನಡುವೆ ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿದ್ದರು.
ಡಿನೋಟಿಫಿಕೇಷನ್ ನಂತರ 2010ರ ಜುಲೈನಲ್ಲಿ ಕುಮಾರಸ್ವಾಮಿ ಅವರ ಸೋದರಮಾವ ಚನ್ನಪ್ಪ ಅವರ ಹೆಸರಿಗೆ ಜಮೀನು ನೋಂದಣಿಯಾಗಿದೆ ಎಂದು ಆರೋಪಿಸಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿಚಾರಣೆ ಎದುರಿಸಿದ್ದಾರೆ.