ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಾಳೆ ನಡೆಯಬೇಕಿದ್ದ ಕಾರ್ಯಕ್ರಮ ರದ್ದು ಮಾಡಲಾಗಿದೆ.
ಎರಡು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾಗಿದ್ದಾರೆ. ಗಣ್ಯರ ನಿಧಕ್ಕೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಅಲ್ಲದೇ, ಬೆಳಗಾವಿಯಲ್ಲಿ ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.
ಬೆಳಗಾವಿಯಲ್ಲಿ ಇಂದಿನಿಂದ ಎರಡು ದಿನ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ನಡೆಯುತ್ತಿದೆ. ಮೊದಲ ದಿನವಾದ ಇಂದು ಎರಡು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಮಧ್ಯೆ ಮನಮೋಹನ್ ಸಿಂಗ್ ನಿಧನರಾಗಿದ್ದರಿಂದಾಗಿ ನಾಳೆ ನಡೆಯಬೇಕಿದ್ದ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.
ದೆಹಲಿಗೆ ಹೊರಡಲು ವಿಶೇಷ ವಿಮಾನ ಸಿದ್ಧವಾಗಿದೆ. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ತೆರಳಲಿದ್ದು, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಸಿ ವೆನುಗೋಪಾಲ್ ಸೇರಿದಂತೆ ಹಲವು ನಾಯಕರು ತೆರಳಲಿದ್ದಾರೆ. ಹೀಗಾಗಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ನಾಯಕರಿಗೆ ಭದ್ರತೆ ಒದಗಿಸಲಾಗಿದೆ.