ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಾಗೂ ಐದು ನಗರ ಪಾಲಿಕೆಗಳ ಚುನಾವಣೆಗೆ ಮತ್ತೆ ಅನಿಶ್ಚಿತತೆ ಎದುರಾಗುವ ಲಕ್ಷಣಗಳು ಕಾಣಿಸುತ್ತಿವೆ. ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ ಆಗಸ್ಟ್ 30ರೊಳಗೆ ಚುನಾವಣೆ ನಡೆಸುವುದು ಕಷ್ಟಕರವಾಗಿದೆ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಕಾಲಾವಕಾಶ ಕೋರಿ ಅಫಿಡವಿಟ್ ಸಲ್ಲಿಸಲು ಸಿದ್ಧತೆ ನಡೆಸಿದೆ ಎಂಬ ಮಾಹಿತಿ ನಗರಾಭಿವೃದ್ಧಿ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ರಾಜ್ಯ ಚುನಾವಣಾ ಆಯೋಗದ ಮೂಲಕ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸರ್ಕಾರ ಚಿಂತನೆ ನಡೆಸಿದೆ. ಚುನಾವಣೆಗೆ ಅಗತ್ಯವಿರುವ ಸಿಬ್ಬಂದಿಯ ಬಹುಪಾಲು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯದಲ್ಲಿ ನಿರತರಾಗಿರುವುದರಿಂದ ಚುನಾವಣಾ ಸಿದ್ಧತೆ ನಡೆಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಸರ್ಕಾರದ ಪ್ರಮುಖ ವಾದವಾಗಿದೆ.
ಜಿಬಿಎ ವ್ಯಾಪ್ತಿಯಲ್ಲಿ ಬೃಹತ್ ಪ್ರಮಾಣದಲ್ಲಿ ಚುನಾವಣೆ ನಡೆಸಲು ಬೇಕಾದಷ್ಟು ಸಿಬ್ಬಂದಿ ಲಭ್ಯವಿಲ್ಲ. ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಚುನಾವಣಾ ಪೂರ್ವ ಸಿದ್ಧತೆ ಆರಂಭಿಸಲು ಸರ್ಕಾರ ನಿರ್ಧರಿಸಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಮೇ 2026ರಲ್ಲಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಜಿಬಿಎ ಹಾಗೂ ಐದು ನಗರ ಪಾಲಿಕೆಗಳ ಚುನಾವಣೆಗಳನ್ನು ಆಗಸ್ಟ್ 30ರೊಳಗೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ ಪ್ರಸ್ತುತ ಆಡಳಿತಾತ್ಮಕ ಹಾಗೂ ಸಿಬ್ಬಂದಿ ಕೊರತೆಯ ಹಿನ್ನೆಲೆಯಲ್ಲಿ ಆ ಗಡುವು ಪಾಲಿಸುವುದು ಸವಾಲಾಗಿದೆ ಎಂದು ಸರ್ಕಾರ ವಾದ ಮಂಡಿಸುವ ಸಾಧ್ಯತೆ ಇದೆ.
ರಾಜ್ಯ ಸರ್ಕಾರದ ಅರ್ಜಿಗೆ ಸುಪ್ರೀಂ ಕೋರ್ಟ್ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ. ಒಂದು ವೇಳೆ ಕಾಲಾವಕಾಶ ನೀಡಿದರೆ, ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಮತದಾರರು ತಮ್ಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಇನ್ನೂ ಕೆಲವು ತಿಂಗಳು ಕಾಯಬೇಕಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ಕುಡಚಿ ಸೇತುವೆ ಜಲಾವೃತ ; ಕರ್ನಾಟಕ-ಮಹಾರಾಷ್ಟ್ರ ಸಂಪರ್ಕ ಕಡಿತ!



















