ಜೈಪುರ: ಜೈಪುರ ಗ್ಯಾಸ್ ಟ್ಯಾಂಕರ್ ದುರಂತದಲ್ಲಿ 11 ಜನರು ಸಾವನ್ನಪ್ಪಿ, ಬರೋಬ್ಬರಿ 41 ಜನರು ಗಾಯಗೊಂಡಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಅಲ್ಲದೇ, ಸಂತ್ರಸ್ತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
“ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಘಟನೆಯ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಸಹಾಯ ಮಾಡಲಿದೆ. ಪ್ರತಿಯೊಬ್ಬ ಮೃತರ ಸಂಬಂಧಿಕರಿಗೆ PMNRFನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50 ಸಾವಿರ ರೂ. ಗಳನ್ನು ನೀಡಲಾಗುವುದು ಎದು ಪ್ರಧಾನಿ ಕಚೇರಿಯಿಂದ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.
ಇಂದು ಬೆಳಗ್ಗೆ, ಜೈಪುರ-ಅಜ್ಮೀರ್ ಮಾರ್ಗದಲ್ಲಿ ಎಲ್‌ಪಿಜಿ ಮತ್ತು ಇತರ ವಾಹನಗಳನ್ನು ಸಾಗಿಸುತ್ತಿದ್ದ ಟ್ಯಾಂಕರ್‌ಗೆ ರಾಸಾಯನಿಕಗಳನ್ನು ತುಂಬಿದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. 11 ಜನರು ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಶೇ. 60ಕ್ಕೂ ಹೆಚ್ಚು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಪ್ರಸ್ತುತ, 28 ರೋಗಿಗಳು ದಾಖಲಾಗಿದ್ದಾರೆ, ಆರು ಜನ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.