ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.
ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ (High Court) ಷರತ್ತುಬ್ಧ ಜಾಮೀನು (Bail) ನೀಡಿದೆ. ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ವಿಚಾರಣೆ ನಡೆಸಿದೆ.
ಪ್ರಕರಣದ ಆರೋಪಿಗಳಾಗಿರುವ ಹುಕ್ಕೇರಿಯ ಭರತ್ ಕುರಾನೆ (42), ಮಹಾರಾಷ್ಟ್ರದ ಶ್ರೀಕಾಂತ್ ಪಂಗರ್ಕರ್ (48), ಶಿಕಾರಿಪುರದ ಸುಜಿತ್ ಕುಮಾರ್ (42), ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಲೇಕರ್ (43) ಜಾಮೀನು ಪಡೆದಿದ್ದಾರೆ.
ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು. ಆರೋಪಿಗಳು ಪ್ರಸಿಕ್ಯೂಷನ್ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು.
ಬೇರೆ ಇಂಥದ್ದೆ ಪ್ರಕರಣದಲ್ಲಿ ಆರೋಪಿಯಾಗಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.ಆರೋಪಿಗಳ ವಿರುದ್ಧ 2017 ರಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು 2018 ರಿಂದ ನ್ಯಾಯಾಂಗ ಬಂಧನದಲ್ಲಿದ್ದರು.