ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ನಿರೀಕ್ಷೆಗೂ ಮೀರಿ ಸುರಿದಿದ್ದು, ಹಲವೆಡೆ ದಾಖಲೆ ಬರೆದಿದೆ. ಈ ಮಧ್ಯೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ, ಜೂನ್ 4ರ ನಂತರ ರಾಜ್ಯದಲ್ಲಿ ಮಳೆಯ ಪ್ರಣಾಮ ಹೆಚ್ಚಾಗಲಿದೆ. ಮುಂದಿನ ಐದು ದಿನ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.