ಮೈಸೂರು : ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಹೆಬ್ಬಾಳ ರಿಂಗ್ ರಸ್ತೆಯಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ನೀಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಕಾಲದಲ್ಲಿ ಕನ್ನಡದಲ್ಲಿ ರೈಲ್ವೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಈಗ ಆ ಅವಕಾಶ ನೀಡಲಾಗುತ್ತಿಲ್ಲ ಎಂದು ಕರವೇ ಕಾರ್ಯಕರ್ತರು ಆರೋಪಿಸಿದರು. ಕೇಂದ್ರ ಸಚಿವ ವಿ. ಸೋಮಣ್ಣ ಈ ವಿಚಾರದಲ್ಲಿ ಧ್ವನಿ ಎತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.
“ಕನ್ನಡಕ್ಕೆ ಅವಕಾಶ ನೀಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ಕಾರ್ಯಕರ್ತರು ಎಚ್ಚರಿಸಿದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸ್ ವಾಹನಗಳಲ್ಲಿ ಕರೆದೊಯ್ದಿದ್ದಾರೆ.
ಇದನ್ನೂ ಓದಿ : ಕಟ್ಟಡ ಮಾಲೀಕರಿಗೆ ಶಾಕ್ ಕೊಟ್ಟ ಜಿಬಿಎ..!



















