ಬೆಂಗಳೂರು: ಬೆಂಗಳೂರು ಮಹಾನಗರದ ಅಭಿವೃದ್ಧಿ ದೃಷ್ಟಿಯಿಂದ ಶಾಸಕರಿಗೆ ಹೆಚ್ಚು ಅನುದಾನವನ್ನು ನೀಡಬೇಕು ಹಾಗೂ ಬಜೆಟ್ ನಲ್ಲಿ 6 ರಿಂದ 8 ಸಾವಿರ ಕೋಟಿ ರೂ. ಅನುದಾನ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಸೌಕರ್ಯ ವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಹಣ ಕೊಡಬೇಕಿದೆ. ಫ್ಲೈಓವರ್, ವಿವಿಧ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಅವುಗಳಿಗೆ ಹೆಚ್ಚು ಅನುದಾನ ನೀಡಿ ಹೆಚ್ಚು ಒತ್ತು ಕೊಡಬೇಕೆಂದು ಕೋರಿರುವುದಾಗಿ ತಿಳಿಸಿದರು.
ಹಿಂದೆ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದಾಗ ಪ್ರತಿ ಸಾರಿಯೂ ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಸಂಬಂಧಿಸಿ ಬಿಬಿಎಂಪಿಗೆ ಆರರಿಂದ 8 ಸಾವಿರ ಕೋಟಿ ಅನುದಾನವನ್ನು ಬಜೆಟ್‍ನಲ್ಲಿ ನೀಡುತ್ತಿದ್ದರು. ಆದರೆ, ಕಳೆದೆರಡು ವರ್ಷಗಳಿಂದ ಬೆಂಗಳೂರಿನ ಅಭಿವೃದ್ಧಿಗೆ ಅನುದಾನ ನೀಡಿಲ್ಲ ಎಂದು ಆಕ್ಷೇಪಿಸಿದರು.
ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಸಲು ಒತ್ತಾಯಿಸಲಾಗಿದೆ. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಮ್ಮ ಇತಿಮಿತಿಯೊಳಗೆ ಎಷ್ಟು ಅನುದಾನ ಕೊಡಲು ಸಾಧ್ಯವೋ ಆ ಕಡೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಹಿಂದೆ ಯಾವತ್ತೂ ಬೆಂಗಳೂರು ನಗರಕ್ಕೆ ಇಂಥ ದುಸ್ಥಿತಿ ಬಂದಿರಲಿಲ್ಲ. ಪ್ರತಿ ಬಜೆಟ್ ನಲ್ಲೂ ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಆರರಿಂದ 8 ಸಾವಿರ ಕೋಟಿ ಅನುದಾನವನ್ನು ಬಜೆಟ್‍ನಲ್ಲಿ ನೀಡುತ್ತಿದ್ದರು. ಯಡಿಯೂರಪ್ಪನವರು ಹಿಂದೆ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಶಾಸಕರಿಗೂ ಹೆಚ್ಚಿನ ಅನುದಾನ ನೀಡಿದ್ದರು. ಕರ್ನಾಟಕವನ್ನು ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಕ ನೋಡುತ್ತಾರೆ ಎಂದು ಹೇಳಿದ್ದಾರೆ.
ಗ್ರೇಟರ್ ಬೆಂಗಳೂರಿನ ಹೆಸರಿನಲ್ಲಿ ಬಿಬಿಎಂಪಿ ಚುನಾವಣೆ ಮುಂದೂಡಬಾರದು ಎಂಬ ಕುರಿತು ನಾವು ಸದನದಲ್ಲೂ ಚರ್ಚೆ ಮಾಡುತ್ತೇವೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಅವೈಜ್ಞಾನಿಕ ಟನೆಲ್ ರಸ್ತೆ ಕುರಿತು ಕೂಡ ಸದನದಲ್ಲಿ ಪ್ರಸ್ತಾಪಿಸಲಿದ್ದೇವೆ ಎಂದರು.